ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಸುಮಾರು 4 ಸಾವಿರಕ್ಕೂ ಅಧಿಕ ಪ್ರಯಾಣಿಕರಿಂದ 1 ಲಕ್ಷಕ್ಕೂ ಅಧಿಕ ಮೊತ್ತದ ದಂಡವನ್ನು ವಸೂಲಿ ಮಾಡಿರುವುದಾಗಿ ಕೆಎಸ್‌ಆರ್‌ಟಿಸಿ ತಿಳಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ” 2025ರ ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿತ್ತು. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41209 ವಾಹನಗಳನ್ನು ತನಿಖೆಗೊಳಪಡಿಸಿ 4029 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ” ಎಂದು ತಿಳಿಸಿದ್ದಾರೆ.

“ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಸುಮಾರು 4,010 ಪ್ರಯಾಣಿಕರಿಂದ ಒಟ್ಟು 7,76,201/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದ್ದಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,08,784/- ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖಾ ರೀತಿಯ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣ ಮಾಡುವಂತೆ ಕೆಎಸ್‌ಆರ್‌ಟಿಸಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್ ವಿನಂತಿಸಿದ್ದಾರೆ.