ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, “ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ. ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ” ಎಂದಿದ್ದಾರೆ.
“ಈ ಅಗ್ನಿಶಾಮಕ ವಾಹನಗಳು ನೆಲದ ಮೇಲಿನ ಬೆಂಕಿಯನ್ನು ನಂದಿಸಿಕೊಂಡು ವೇಗದಿಂದ ಮುನ್ನುಗ್ಗಬಲ್ಲವು. ವಿಜಯಪುರ ವಿಮಾನ ನಿಲ್ದಾಣದ ಮೂಲ ವಿನ್ಯಾಸದಲ್ಲಿ ಈ ಸೌಲಭ್ಯಗಳು ಇರಲಿಲ್ಲ. ಆಮೇಲೆ ಇದರ ಜತೆಗೆ ಇನ್ನೂ ಹಲವು ಅನುಕೂಲಗಳನ್ನು ಸೇರಿಸಲಾಯಿತು. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ” ಎಂದು ಅವರು ವಿವರಿಸಿದ್ದಾರೆ.
“ಅಗ್ನಿಶಾಮಕ ವಾಹನಗಳು ಬಂದಿರುವುದರಿಂದ ವಿಮಾನ ನಿಲ್ದಾಣ ಉದ್ಘಾಟನೆಯತ್ತ ಮತ್ತೊಂದು ಹೆಜ್ಜೆ ಮುಂದಿಡಲಾಗಿದೆ. ಪರಿಸರ ಸಂಬಂಧಿ ಅನುಮತಿ ಮಾತ್ರ ಬಾಕಿ ಇದ್ದು, ಅದನ್ನು ಪಡೆದುಕೊಳ್ಳಲು ಕೂಡ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.