ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರು ಮಠದ ಹಾಸ್ಟೆಲ್‌ನಲ್ಲಿದ್ದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (CWC) ಪೊಲೀಸರಿಗೆ ವರದಿಯೊಂದನ್ನು ಸಲ್ಲಿಸಿದೆ.
ಸಂತ್ರಸ್ತರೆನ್ನಲಾದ ಮೂವರು ಬಾಲಕರ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಸಮಿತಿಯು, ಮೇ.16ರಂದು ಹರಿಹರ ಗ್ರಾಮೀಣ ಪೊಲೀಸ್ ಠಾಣೆಗೆ 2 ಪುಟಗಳ ವರದಿಯನ್ನು ಹಸ್ತಾಂತರಿಸಿದೆ. ಈ ವರದಿಯಲ್ಲಿ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ.
ಸ್ವಾಮೀಜಿಯವರು ತಮ್ಮ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮೂವರು ಪೋಷಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಸಮಿತಿಯ ಅಧ್ಯಕ್ಷೆ ಮಂಜುಳಾ ಮಹೇಶ್ ನೇತೃತ್ವದ ತಂಡ ಏ.17ರಂದು ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಮಕ್ಕಳ ಮಲಗುವ ಕೋಣೆ, ಅಡುಗೆ ಮನೆ, ಊಟದ ಹಾಲ್ ಸೇರಿದಂತೆ ವಿವಿಧ ಸ್ಥಳಗಳನ್ನು ವೀಕ್ಷಿಸಿದ್ದ ತಂಡ, ವಚನಾನಂದ ಸ್ವಾಮೀಜಿ ಅವರ ಹೇಳಿಕೆಯನ್ನೂ ದಾಖಲಿಸಿಕೊಂಡಿತ್ತು.
16 ವರ್ಷದ ಬಾಲಕನ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮೇ.8ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ (SP) ಎಚ್ ಟಿ ಶೇಖರ್, “ತನಿಖಾಧಿಕಾರಿಗಳು ಈಗಾಗಲೇ ಇಬ್ಬರು ಬಾಲಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಉಳಿದವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.14ರಂದು ಸ್ವಾಮಿಯನ್ನು ವಿಚಾರಣೆಗೊಳಪಡಿಸಿ ವೈದ್ಯಕೀಯ ತಪಾಸಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿತ್ತು. ಪೊಲೀಸರು ಸೋಮವಾರ (ಮೇ.18) ಸತತ ಎರಡನೇ ಬಾರಿಗೆ ಸ್ವಾಮಿಯನ್ನು ಸುಮಾರು 4 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮಿ, “ಪೊಲೀಸರು ನೋಟಿಸ್ ನೀಡಿದ್ದರಿಂದ ನಾನು ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ತನಿಖಾ ಪ್ರಕ್ರಿಯೆಗೆ ನಾನು ಸಂಪೂರ್ಣವಾಗಿ ಸಹಕರಿಸುತ್ತೇನೆ” ಎಂದು ತಿಳಿಸಿದರು.




