ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಈ ಸಂಬಂಧ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಂತಿಮ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ.
ಸಿಐಡಿ ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಮತ್ತು ನಿಗಮದ ಅಂದಿನ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಆರೋಪಿಗಳ ಪಟ್ಟಿಯಿಂದ ಕೈಬಿಟ್ಟಿದೆ. ಇಬ್ಬರನ್ನೂ ಪ್ರಕರಣದ ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಿದೆ. ಹಾಗಾಗಿ ಇಬ್ಬರೂ ಈಗ ಆರೋಪಿಗಳಲ್ಲಿ, ಸಾಕ್ಷಿಗಳಾಗಿದ್ದಾರೆ.
ಹಾಗೆಯೇ ನಿಗಮದ ಹಣವನ್ನು ಮಾಜಿ ಸಚಿವ ಬಿ ನಾಗೇಂದ್ರ ಅವರು ಎಲ್ಲೂ ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ: BREAKING NEWS | ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ
ಪ್ರಸ್ತುತ ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಪರುಶುರಾಮ್, ಮಧ್ಯವರ್ತಿಗಳಾದ ನೆಕ್ಕುಂಟಿ ನಾಗರಾಜ್ ಮತ್ತು ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಈ ಆರೋಪಿಗಳು ಹಣವನ್ನು ಹೂಡಿಕೆ ಮಾಡಿದರೆ ದುಪ್ಪಟ್ಟು ಮಾಡಿಕೊಡುವುದಾಗಿ ರಹಸ್ಯವಾಗಿ ಡೀಲ್ ಮಾಡಿಕೊಂಡಿದ್ದರು. ಈ ಸಂಬಂಧ ಹಣ ವರ್ಗಾವಣೆಯನ್ನೂ ಮಾಡಿಸಿಕೊಂಡಿದ್ದರು. ಆದರೆ ಈ ವಹಿವಾಟುಗಳ ಬಗ್ಗೆ ಅಂದಿನ ಸಚಿವ ನಾಗೇಂದ್ರ ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಸಿಐಡಿ ಕ್ಲೀನ್ ಚಿಟ್ ನೀಡಿದ್ದರೂ, ಇದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ಮುಂದುವರೆಸಿದೆ. ಇಡಿ ತನಿಖೆಯಲ್ಲಿ ನಾಗೇಂದ್ರ ಅವರನ್ನೇ ಪ್ರಮುಖ ಆರೋಪಿ ಎಂದು ಉಲ್ಲೇಖಿಸಲಾಗಿದೆ.
ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಅವರು 2024ರ ಮೇ ತಿಂಗಳಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬಳಿಕ ಈ ಹಗರಣ ಬೆಳಕಿಗೆ ಬಂದಿದೆ. ಈ ಆತ್ಮಹತ್ಯೆ ಬಳಿಕ ನಿಗಮದ ಖಾತೆಯಿಂದ ಸುಮಾರು 89.63 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ಬಹಿರಂಗವಾಗಿದೆ. ಅದಾದ ಬಳಿಕ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
2026ರ ಆಗಸ್ಟ್‌ನಲ್ಲಿ ಡಿ ಕೆ ಶಿವಕುಮಾರ್ ಸಚಿವ ಸಂಪುಟದಲ್ಲೂ ನಾಗೇಂದ್ರ ಅವರಿಗೆ ಸ್ಥಾನ ನೀಡಲಾಗಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ 25 ದಿನಗಳಲ್ಲೇ ಅಂದರೆ ಆಗಸ್ಟ್ 28, 2026 ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದರು. ಇದೀಗ ಸಿಐಡಿ ಕ್ಲೀನ್ ಚಿಟ್ ನೀಡಿರುವುದು ಮತ್ತೆ ಸಂಪುಟ ಸೇರ್ಪಡೆಯ ಕುರಿತು ಕುತೂಹಲ ಮೂಡಿಸಿದೆ.



