ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ತೀರ್ಪು ಪ್ರಕಟಿಸಿದ್ದಾರೆ. ಇಬ್ಬರು ಮಾಫಿ ಸಾಕ್ಷಿಗಳನ್ನು ಬಿಟ್ಟು ಉಳಿದವರ ತೀರ್ಪು ಇಂದು ಪ್ರಕಟವಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ.
ಇದನ್ನು ಓದಿದ್ದೀರಾ? BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು
ಇನ್ನು ತೀರ್ಪು ಪ್ರಕಟವಾದ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿನಯ್ ಕುಲಕರ್ಣಿ ಅವರ ಧಾರವಾಡದಲ್ಲಿರುವ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಹಾಗೆಯೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಏನಿದು ಯೋಗಿಶ್ ಗೌಡ ಕೊಲೆ ಪ್ರಕರಣ?
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು 2016ರ ಜೂನ್ 15ರಂದು ಜಿಮ್ ಮುಂಭಾಗದಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅದರಲ್ಲಿ 15ನೇ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ.
ಈ ಪ್ರಕರಣದ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿ ಈ ಕೊಲೆಯಲ್ಲಿ ವಿನಯ್ ಕುಲಕರ್ಣಿ ಪಾತ್ರವಿದೆ ಎಂದು ದೂರಿದ್ದರು. ಹಾಗೆಯೇ ತನ್ನನ್ನೂ ಕೊಲೆ ಮಾಡಲು ವಿನಯ್ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 20 ಲಕ್ಷ ರೂಪಾಯಿ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಆರೋಪ ಮಾಡಲಾಗಿತ್ತು.
ಇದನ್ನು ಓದಿದ್ದೀರಾ? ಯೋಗಿಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ
ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದರು. ಆದರೆ, ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಸಿಬಿಐ ಆರೋಪಿಸಿದೆ. ವಿನಯ್ ಕುಲಕರ್ಣಿ ಅವರನ್ನು ಈ ಕೊಲೆಯ ಮುಖ್ಯ ಸಂಚುಗಾರ (Main Conspirator) ಎಂದು ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರು 2020 ರಲ್ಲಿ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದರು. ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಇದೀಗ ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ತೀರ್ಪು ಪ್ರಕಟಿಸಿದೆ.






