ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ, ಮಂಗಳವಾರದಿಂದ ಮುಂದಿನ 3 ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಗೆ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳ ಜೊತೆಗೆ, ದಕ್ಷಿಣ ಕನ್ನಡ, ಉಡುಪಿ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಿದೆ.
ಇನ್ನು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕನಿಷ್ಠ ತಾಪಮಾನವು ತೀವ್ರವಾಗಿ ಕುಸಿಯುತ್ತಿದೆ. ಕನಿಷ್ಠ 11.4 ಡಿಗ್ರಿ ಸೆಲ್ಸಿಯಸ್‌ನಿಂದ 22.1 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುತ್ತಿದೆ. ವಿಶೇಷವಾಗಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಈ ಭಾಗದ ಬಾಗಲಕೋಟೆ, ಬೆಳಗಾವಿ, ಹಾವೇರಿ, ಗದಗ, ಧಾರವಾಡ, ದಾವಣಗೆರೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 12ರಿಂದ 14 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.
ಗಮನಾರ್ಹವಾಗಿ, ಈ ವರ್ಷದ ಮುಂಗಾರಿನಲ್ಲಿ ವಾಡಿಕೆಯ 852 ಮಿ.ಮೀ. ಮಳೆಯ ಬದಲಿಗೆ ಕೇವಲ 551 ಮಿ.ಮೀ. ಮಳೆಯಾಗಿದ್ದು, ರಾಜ್ಯದ 30 ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿತ್ತು. ಸುಮಾರು 226 ತಾಲೂಕುಗಳ ಬರ ಪೀಡಿತವೆಂದು ಘೋಷಿಸಲಾಗಿದೆ. ಅಕ್ಟೋಬರ್ 1ರಿಂದ ಆರಂಭವಾದ ಹಿಂಗಾರಿನಲ್ಲಿಯೂ 165 ಮಿ.ಮೀ. ಬದಲಿಗೆ ಕೇವಲ 90 ಮಿ.ಮೀ. ಮಳೆ ಮಾತ್ರ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ತಿಳಿಸಿದೆ.


