ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇನ್ನುಳಿದಂತೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಎಲ್ಲ 11 ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದಾಗ್ಯೂ, ಮುಂಜಾನೆ ಮತ್ತು ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ಅತಿ ಹೆಚ್ಚು – 15.8 ಮಿ.ಮೀಟರ್ ಮಳೆಯಾಗಿದೆ. ಒಟ್ಟಾರೆ ಬೆಂಗಳೂರು ನಗರದಲ್ಲಿ 4.1 ಮಿ.ಮೀಟರ್ ಮಳೆ ದಾಖಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ, ರಾಜಾಜಿನಗರ, ಶಿವಾಜಿನಗರ, ವಿಧಾನಸೌಧ, ಕೆ.ಆರ್. ಮಾರುಕಟ್ಟೆ, ಜಯನಗರ, ಜೆ.ಪಿ. ನಗರ, ಬಸವನಗುಡಿ ಸೇರಿದಂತೆ ಹಲವೆಡೆ ಸುರಿದ ಮಳೆಯಿಂದಾಗಿ ಒಳಚರಂಡಿಗಳು ತುಂಬಿ ರಸ್ತೆಯಲ್ಲಿ ನೀರು ಹರಿದಿದೆ. ಪಾಲಿಕೆ ಕಾಮಗಾರಿಗಳು ಮತ್ತು ರಸ್ತೆ ಗುಂಡಿಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ತೀವ್ರ ಪರದಾಡುವಂತಾಗಿದೆ.
ಈ ಲೇಖನ ಓದಿದ್ದೀರಾ?: ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕ ಮಾತ್ರವಲ್ಲದೆ ಕೇರಳ, ಆಂಧ್ರ ಕರಾವಳಿ, ರಾಯಲಸೀಮಾ ಹಾಗೂ ತಮಿಳುನಾಡಿನಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕಿ ಡಾ. ಲತಾ ಶ್ರೀಧರ್ ತಿಳಿಸಿದ್ದಾರೆ.


