ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಅಂಡಮಾನ್ ಮತ್ತು ಬಂಗಾಳಕೊಲ್ಲಿಯಿಂದ ಚಂಡಮಾರುತ ಬೀಸುತ್ತಿದ್ದು, ಗಾಳಿ ಬೀಸುವ ವೇಗವೂ ಹೆಚ್ಚಾಗುತ್ತಿದೆ ಎಂದು ಇಲಾಖೆ ಹೇಳಿದೆ.
ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಕಳೆದ ಮೂರುನ ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ರಾತ್ರಿ ಕೂಡ ಬೆಂಗಳೂರಿನ ಹಲವು ಭಾಗಗಳಲ್ಲಿ ಜೋರು ಮಳೆಯಾಗಿದೆ. ಭಾನುವಾರ ಬೆಳಿಗ್ಗೆಯಿಂದಲೂ ಮೋಡಕವಿದ ವಾತಾವರಣ ಮುಂದುವರೆದಿದೆ.



