ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಜುಲೈ 10ರವರೆಗೆರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ರಾಜ್ಯದ 14 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ ಹಾಗೂ ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ಸೇರಿದಂತೆ ಒಟ್ಟು 14 ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಅಲ್ಲದೆ, ಚಿಕ್ಕಮಗಳೂರಿನ ಪ್ರಸಿದ್ಧ ಬೆಟ್ಟಗಳಲ್ಲಿ ಟ್ರಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
This video cannot be played in your browser. Open the video directly
ರಾಜ್ಯದ ಹಲವೆಡೆ ಮಳೆಯಿಂದಾಗಿ ಅನಾಹುತಗಳು ಸಂಭವಿಸಿವೆ. ಶಿವಮೊಗ್ಗದ ಆಗುಂಬೆ ಬಳಿ ಮಾಲತಿ ನದಿಯ ಪ್ರವಾಹದಲ್ಲಿ ವೃದ್ಧರೊಬ್ಬರು ತೇಲಿ ಹೋಗಿದ್ದಾರೆ. ಚಿಕ್ಕಮಗಳೂರಿನ ಮಲೆಮನೆ ಮತ್ತು ಕೊಡಗಿನಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಉಡುಪಿಯ ವಾರಂಬಳ್ಳಿಯಲ್ಲಿ ಶಾಲೆಯ ಮೇಲ್ಬಾವಣಿಯ ಹೆಂಚು ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಕೆಲವೆಡೆ ಗೋಡೆ ಕುಸಿದು ಜಾನುವಾರುಗಳು ಮೃತಪಟ್ಟಿವೆ.
ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂತೆಯೇ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ 50-60 ಕಿ.ಮೀ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನಿರಂತರ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದೆ. ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಸೇರಿದಂತೆ ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಪರಿಣಾಮವಾಗಿ, ಬೆಳಗಾವಿ ಮತ್ತು ಚಿಕ್ಕೋಡಿ ಭಾಗದ ಮಲಿಕವಾಡ-ದತ್ತವಾಡ, ಯಡೂರ-ಕಲ್ಲೋಳ ಸೇರಿದಂತೆ ಸುಮಾರು 7 ರಿಂದ 8 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಆಲಮಟ್ಟಿ ಅಣೆಕಟ್ಟೆಯ ಒಳಹರಿವಿನಲ್ಲೂ ಭಾರಿ ಹೆಚ್ಚಳ ಕಂಡುಬಂದಿದೆ.





