ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಒಂದು ವಾರದ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂಧು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಜೂನ್ 19ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದೆ ಎಂದು ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ಮಾಹಿತಿ ಇದೆ.
ರಾಜ್ಯ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ತೀರದಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಭಾನುವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದೆ. ಮಧ್ಯಾಹ್ನದ ವೇಳೆ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಅಂತೆಯೇ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಸಹಿತ ಬಿರುಗಾಳಿ ಬಿಸಲಿದೆ. ಹಲವು ಭಾಗಗಳಲ್ಲಿ ಬೆಳೆಗಳು ಜಲಾವೃತಗೊಳ್ಳುವ ಆತಂಕವೂ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಮಳೆ ಆರ್ಭಟ ಹೆಚ್ಚಾಗಿದೆ. ರಾಜಾಜಿನಗರ, ಯಶವಂತಪುರ, ಉಲ್ಲಾಳ, ಹೆಬ್ಬಾಳ, ಮೆಜೆಸ್ಟಿಕ್ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಸಂಜೆ ಮತ್ತು ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಈ ಲೇಖನ ಓದಿದ್ದೀರಾ?: ರಾಮಮಂದಿರ ದೇಣಿಗೆ ದುರುಪಯೋಗ: ಬಿಜೆಪಿಯ ಬ್ರಿಜ್ ಭೂಷಣ್ ಆರೋಪಗಳ ಸುತ್ತ
ರೈತ ಸಾವು
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಎಸ್.ಟಿ ಆನಂದ್ ಎಂಬವರು ಶುಕ್ರವಾರ ಸಂಜೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಅವರು ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ ಎಂದು ತಿಳಿದುಬಂದಿದೆ.




