ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಬೇಕೆಂದು ರಾಜ್ಯ ಮಹಿಳಾ ಆಯೋಗ ಪೊಲೀಸ್ ಇಲಾಖೆಗೆ ಪತ್ರ ಬರೆದಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಶೇರ್ ಆಗುತ್ತಿರುವುದರಿಂದ ಲೈಂಗಿಕ ಹಗರಣದ ಸಂತ್ರಸ್ತೆಯರ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತಕ್ಷಣ ತೀವ್ರ ಕ್ರಮ ತೆಗೆದುಕೊಳ್ಳುವಂತೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಆಗ್ರಹಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ
ದೇಶದ ಅತೀ ದೊಡ್ಡ ಲೈಂಗಿಕ ಹಗರಣಲ್ಲಿ ಭಾಗಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ದೂರು ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿವೆ. ಪ್ರಜ್ವಲ್ ತಂದೆ ಹೊಳೇನರಸೀಪುರ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಕೂಡ ಎರಡು ಪ್ರಕರಣ ದಾಖಲಾಗಿದೆ.
ಪ್ರಕರಣದ ಗಂಭೀರತೆಯನ್ನು ಅರಿತಿರುವ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಲೈಂಗಿಕ ಕಿರುಕುಳಕ್ಕೆ ಒಳಗಾದ ಐವರು ಸಂತ್ರಸ್ತೆಯರಿಂದ ಹೇಳಿಕೆಯನ್ನು ದಾಖಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆರೋಪಿಗಳಾದ ಪ್ರಜ್ವಲ್ ರೇವಣ್ಣ ಹಾಗೂ ಹೆಚ್ ಡಿ ರೇವಣ್ಣ ವಿರುದ್ಧ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ತಪ್ಪಿಸಿಕೊಂಡಿದ್ದರೆ, ಮತ್ತೊಬ್ಬ ಆರೋಪಿ ಹೆಚ್ ಡಿ ರೇವಣ್ಣ ಕೂಡ ವಿಚಾರಣೆಗೆ ಹಾಜರಾಗಿಲ್ಲ.
