ಚಾಮರಾಜನಗರ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆ 2023ರಲ್ಲಿ ಹೆಚ್ಚಾಗಿದೆ. ಆ ವರ್ಷ 83 ಪೋಕ್ಸೋ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. 2022ಕ್ಕೆ ಹೋಲಿಸಿದರೆ, 2023ರಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಪೊಲೀಸ್ ಇಲಾಖೆಯ ದಾಖಲೆಗಳು ತಿಳಿಸಿವೆ.
ಚಾಮರಾಜನಗರ ಜಿಲ್ಲೆಯಲ್ಲಿ 2022ರಲ್ಲಿ 48 ಪ್ರಕರಣಗಳು ದಾಖಲಾಗಿದ್ದವು. ಆದರೆ, ಕಳೆದ ವರ್ಷ 83 ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಪೈಕಿ, 75 ಆರೋಪಿಗಳನ್ನು ಬಂಧಿಸಲಾಗಿದೆ. ಆರು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಎಂದು ಇಲಾಖೆಯ ದಾಖಲೆಗಳು ಹೇಳಿವೆ.
2023ರಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಾಲ್ಯ ವಿವಾಹ ಸಂಬಂಧ 38 ಪ್ರಕರಣಗಳು ದಾಖಲಾಗಿವೆ ಎಂದು ದಾಖಲೆಗಳು ತಿಳಿಸಿವೆ.
ಮಕ್ಕಳ ಮೇಲಿನ ಅಪರಾಧಗಳ ತಡೆಗಾಗಿ ಪೋಕ್ಸೋ ಕಾಯ್ದೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರಿ ಹಾಗೂ ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ಅದಾಗಿಯೂ, ಮಕ್ಕಳ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.
“ಬಾಲಕಿಯರ ಮೇಲೆ ದೌರ್ಜನ್ಯ, ಬಾಲ್ಯ ವಿವಾಹ ಪ್ರಕರಣಗಳನ್ನು ಮುಚ್ಚಿಟ್ಟಿದ್ದ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ. ಪೋಕ್ಸೊ ಪ್ರಕರಣಗಳಲ್ಲಿ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುತ್ತೇವೆ. ತ್ವರಿತವಾಗಿ ವಿಚಾರಣೆಗಳು ನಡೆಯುತ್ತವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಹೇಳಿದ್ದಾರೆ.