ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬೀದರ್ ನಗರದಲ್ಲಿ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಹೊಸ ಬಸ್ ನಿಲ್ದಾಣದಲ್ಲಿ ಎದುರು ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ʼರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಬಡವರ, ಕೂಲಿ ಕಾರ್ಮಿಕರು, ಮಧ್ಯಮವರ್ಗದ ಜನರಿಗೆ ಬರೆ ಎಳೆದಂತಾಗಿದೆ. ವಿವಿಧ ಕೆಲಸ ಕಾರ್ಯಗಳಿಗೆ ಸಾರಿಗೆ ಸಂಸ್ಥೆಯ ಬಸ್‌ಗಳನ್ನೇ ಅವಲಂಬಿಸಿರುವ ಪ್ರಯಾಣಿಕರಿಗೆ ಸರ್ಕಾರ ಪ್ರಯಾಣ ದರ ದುಬಾರಿಗೊಳಿಸುವುದು ಸರಿಯಾದ ನಿರ್ಧಾರ ಅಲ್ಲ. ಸರ್ಕಾರ ಸಾರಿಗೆ ಸಂಸ್ಥೆಯ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕೇ ಹೊರತು ಪ್ರಯಾಣ ದರ ಹೆಚ್ಚಳವಲ್ಲʼ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ʼರಾಜ್ಯ ಸರ್ಕಾರದ ʼಶಕ್ತಿʼ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಸರ್ಕಾರದ ಗಮನಕ್ಕಿದೆ. ಸಾರಿಗೆ ಇಲಾಖೆಯ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡದೇ ಇರುವ ಕಾರಣಕ್ಕೆ ಗ್ರಾಮೀಣ ಭಾಗದ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಕೂಡಲೇ ಅಧಿಕ ಬಸ್‌ಗಳನ್ನು ಓಡಿಸಿ ವಿದ್ಯಾರ್ಥಿಗಳ, ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕುʼ ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ
ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಸಹ ಕಾರ್ಯದರ್ಶಿ ನಾಗರಾಜ ಸುಲ್ತಾನಪೂರೆ ಹಾಗೂ ಎಬಿವಿಪಿ ಪ್ರಮುಖರಾದ ಪ್ರಾರ್ಥನಾ ಮೆಳಕುಂದೆ, ತಾಲ್ಲೂಕು ಸಂಚಾಲಕ ಮಹೇಶ್, ಪವನ್ ಕುಂಬಾರ್, ಪ್ರಭಾಕರ್, ಅಮರನಾಥ್, ಅತೀಶ್, ಸಾಯಿನಾಥ್, ವಿಶ್ವಾಸ್, ಮಮತಾ, ಕಾವೇರಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.