ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಹಾಗೂ ಜಿಲ್ಲಾ ಸಮಾವೇಶವನ್ನು ಎಪ್ರಿಲ್ 20ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.
ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಳ್ ಮಾತನಾಡಿ, ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಂಘದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ ಸುಮಾರು 2,500 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದ್ದು, ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿಗೊಳಿಸುವ ವಿಷಯ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಕುರಿತು ವೇತನ ಜಾರಿಗೆ ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಈಗಾಗಲೇ ಹಲವು ಪ್ರತಿಭಟನೆಗಳನ್ನು ನಡೆಸಲಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಕೋಶಾಧಿಕಾರಿ ವಿಶಾಲಾಕ್ಷಿ ತಿಳಿಸಿದರು.
ಕನಿಷ್ಠ ವೇತನ ಜಾರಿಯಾಗದ ಹೊರತು ಯಾವುದೇ ಹೆಚ್ಚುವರಿ ಕೆಲಸ ನಿರ್ವಹಿಸುವುದಿಲ್ಲ ಎಂಬ ನಿರ್ಧಾರಕ್ಕೂ ಸಂಘ ಬಂದಿದ್ದು, ಈ ಕುರಿತು ಸಮಾವೇಶದಲ್ಲಿ ಮತ್ತಷ್ಟು ಚರ್ಚೆ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಆಶಾಲತಾ, ರಾಜ್ಯ ಪ್ರತಿನಿಧಿ ಚಂದ್ರಾವತಿ, ಬಂಟ್ವಾಳ ತಾಲೂಕು ಅಧ್ಯಕ್ಷೆ ವಿಜಯವಾಣಿ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ರಾಜೀವಿ ಉಪಸ್ಥಿತರಿದ್ದರು.




