ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಜಿ.ಶಾಂತನಗೌಡ ಗುಡುಗಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಕಾಂಗ್ರೆಸ್ ಪಕ್ಷ ಮತ್ತು ಅಹಿಂದ ಒಕ್ಕೂಟ, ಸಿದ್ದರಾಮಯ್ಯ ಅಭಿಮಾನಿ ಬಳಗ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನು ಇಲ್ಲ. ಹೀಗಿದ್ದರೂ ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ನಾಯಕರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೊಡಿಸುವ ಮೂಲಕ ರಾಜ್ಯ ಸರ್ಕಾರವನ್ನು ಮುಗಿಸುವ ಸಂಚು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಿದರೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಬಹುದು ಎಂದು ಭಾವಿಸಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕುತಂತ್ರ ಫಲಿಸುವುದಿಲ್ಲ. ಭ್ರಷ್ಟ ವ್ಯಕ್ತಿಯೊಬ್ಬ ರಾಜ್ಯಪಾಲರಿಗೆ ಖಾಸಗಿ ದೂರು ನೀಡಿದ ಏಳೆಂಟು ಗಂಟೆಯೊಳಗೆ ಒತ್ತಡಕ್ಕೆ ಮಣಿದು ಶೋಕಾಸ್ ನೋಟಿಸ್ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದರ ಹಿಂದಿನ ಹುನ್ನಾರವೇನು ಎಂದು ಪ್ರಶ್ನಿಸಿದರು.
ಅಹಿಂದ ಒಕ್ಕೂಟದ ಮುಖಂಡ ಹಾಗೂ ಕುರುಬ ಸಮಾಜದ ಅಧ್ಯಕ್ಷ ನೆಲಹೊನ್ನೆ ಮೋಹನ್ ಮಾತನಾಡಿ, ಕುರುಬ ಸಮಾಜದ ಮೇರು ನಾಯಕ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಮುಂದೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶಾಶ್ವತವಾಗಿ ಅಧಿಕಾರ ಕಳೆದುಕೊಳ್ಳಲಿವೆ. ಸಿದ್ದರಾಮಯ್ಯ ಅವರ ಆಡಳಿತ ತೆರೆದ ಪುಸ್ತಕದಂತಿದೆ. ಬಿಜೆಪಿ, ಜೆಡಿಎಸ್‌ನವರು ಕುತಂತ್ರದಿಂದ ಸಿಎಂ ಸಿದ್ದರಾಮಯ್ಯನವರನ್ನು ಏನು ಮಾಡಲಾಗುವುದಿಲ್ಲ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ
ಪ್ರತಿಭಟನೆಯಲ್ಲಿ ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ನೇಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ನಾಗಪ್ಪ, ಸಾಧು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಚ್.ಎ.ಗದ್ದಿಗೇಶ್, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ರವೀಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಾಜೀದ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ.ವಿಶ್ವನಾಥ್, ಎ.ಆರ್.ಚಂದ್ರಶೇಖರ್, ಎಚ್.ಎ.ಉಮಾಪತಿ, ಪ್ರಜಾ ಪರಿವರ್ತನ ವೇದಿಕೆ ತಾಲೂಕು ಅಧ್ಯಕ್ಷರ ಹನುಮಂತಪ್ಪ, ಕೆ.ಒ.ಲೋಕೇಶ್ ಕುಳಘಟ್ಟೆ, ಶಿವಮೂರ್ತಪ್ಪ, ಪ್ರಭು, ಲಕ್ಷ್ಮೀದೇವಿ ಹಾಗೂ ಇತರೆ ಕಾರ್ಯಕರ್ತರು ಭಾಗವಹಿಸಿದ್ದರು.
