ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸುವುದು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಭರವಸೆ ನೀಡಿದರು.
ಪಟ್ಟಣದ ಟೌನ್‌ಹಾಲ್ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಣಸೂರು ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್‌ಗೆ ಚಾಲನೆ ನೀಡಿ, ಟ್ರಸ್ಟ್ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಭೋವಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು.
ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದ್ದು, ಅದರ ಬೆಳವಣಿಗೆಗೆ ಶಾಸಕನಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಟ್ರಸ್ಟ್‌ನ ಪದಾಧಿಕಾರಿಗಳು ಸಾಕಷ್ಟು ಶ್ರಮವಹಿಸಿ ಸಂಘಟನೆಯನ್ನು ಆರಂಭಿಸಿದ್ದು, ಸಮಾಜದ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಅದರ ಕಾರ್ಯಚಟುವಟಿಕೆಗಳಿಗೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸುವುದು ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಬೇಕಾದ ನೆರವನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಅವರು, ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಗತಿಗೆ ಟ್ರಸ್ಟ್ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದ ಗಣ್ಯರು, ಉನ್ನತ ಶಿಕ್ಷಣದ ಮೂಲಕ ಸಮಾಜಕ್ಕೆ ಮಾದರಿಯಾಗುವಂತೆ ಶುಭ ಹಾರೈಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ಕೆಂಪೇಗೌಡರು ಜಾತಿ, ಧರ್ಮ, ಊರಿಗೆ ಸೀಮಿತರಲ್ಲ: ಶಾಸಕ ಟಿ.ಎಸ್. ಶ್ರೀವತ್ಸ
ಕಾರ್ಯಕ್ರಮದಲ್ಲಿ ವರ್ಷ ಹರೀಶ್ ಗೌಡ, ತಾಲೂಕು ಭೋವಿ ಸಮಾಜ ಅಭಿವೃದ್ಧಿ ಟ್ರಸ್ಟ್‌ನ ಗೌರವಾಧ್ಯಕ್ಷ ಗಣೇಶ್, ಅಧ್ಯಕ್ಷ ವಾಸು, ಉಪಾಧ್ಯಕ್ಷರಾದ ಸ್ವಾಮಿ ಭೋವಿ, ಆನಂದ್ ಹಾಗೂ ಭೋವಿ ಸಮಾಜದ ಮುಖಂಡರು, ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.




