ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಪರ ಸಂಘಟನೆಗಳು, ಬಾಲಕಿಗೆ ನ್ಯಾಯ ಒದಗಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನವೆಂಬರ್ 12ರ ಗುರುವಾರ ಮುಂಡಗೋಡ ಪಟ್ಟಣ ಬಂದ್‌ಗೆ ಕರೆ ನೀಡಿವೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಘಟನೆಗಳು, ಅಪ್ರಾಪ್ತ ಬಾಲಕಿ ಮೇಲೆ ನಡೆದಿರುವ ದೌರ್ಜನ್ಯದ ಘಟನೆ ಖಂಡನೀಯವಾಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಪ್ರಕರಣಗಳಲ್ಲಿ ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸುವುದರ ಜೊತೆಗೆ, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿವೆ.
ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಆಂಧ್ರದ ಪ್ರವಾಹ ಸಂತ್ರಸ್ತರಿಗೆ ಬೆಳಕಾದ ಹೆಸ್ಕಾಂ ಸಿಬ್ಬಂದಿಗಳು: 8 ದಿನಗಳ ನಿರಂತರ ಸೇವೆಗೆ ವ್ಯಾಪಕ ಮೆಚ್ಚುಗೆ
ಸಮಾಜದ ಪ್ರತಿಯೊಬ್ಬರೂ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತರಾಗಬೇಕು. ಇಂತಹ ಘಟನೆಗಳು ಮತ್ತೆ ನಡೆಯದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಬಂದ್‌ಗೆ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಸಹಕರಿಸಬೇಕು ಎಂದು ಸಂಘಟನೆಗಳು ಮನವಿ ಮಾಡಿವೆ.
ನವೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಐಬಿ ಬಳಿ ಸಾರ್ವಜನಿಕರು ಸೇರಿ ಪ್ರತಿಭಟನೆಗೆ ಬೆಂಬಲ ಸೂಚಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




