ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶವಬನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ. ನಾಲ್ಕು ವಾರಗಳೊಳಗೆ ವರದಿ ನೀಡುವಂತೆ ಸೂಚಿಸಿದೆ.
ತುಮಕೂರು ತಾಲೂಕು ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ 3.20 ಎಕರೆ ಅರಣ್ಯ ಭೂಮಿಯನ್ನು ವಡ್ಡರಹಳ್ಳಿ ನಿವಾಸಿ ಜೆ. ಶ್ವೇತಕುಮಾರಿ ಎಂಬವರು ಒತ್ತುವರಿ ಮಾಡಿಕೊಂಡಿದ್ದಾರೆ. ಆ ಭೂಮಿಯಲ್ಲಿ ಕಟ್ಟಣ ನಿರ್ಮಾಣ ಮಾಡಿದ್ದಾರೆ. ಒತ್ತುವರಿಯನ್ನು ತೆರವುಗೊಳಿಸಿ, ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದರು.
“ಶ್ವೇತಕುಮಾರಿ ಅವರು ಮುತ್ತಸಂದ್ರ ಗ್ರಾಮದ ಸರ್ವೆ ನಂ.17 ಮತ್ತು ವಡ್ಡರಹಳ್ಳಿ ಗ್ರಾಮದ ಸರ್ವೆ ನಂ.26ರ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ, ಸಂಬಂಧಪಟ್ಟ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಒತ್ತುವರಿ ತೆರವಿಗೆ ಆದೇಶಿಸಬೇಕು” ಎಂದು ಅರ್ಜಿದಾರರು ಕೋರ್ಟ್ ಮನವಿ ಮಾಡಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಹಾಗೂ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ತುಮಕೂರು ಜಿಲ್ಲಾಧಿಕಾರಿ, ತುಮಕೂರು ತಹಶೀಲ್ದಾರ್, ತುಮಕೂರು ಭೂ ದಾಖಲೆಗಳ ಸಹಾಯಕ ನಿರ್ದೇಶಕ, ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ತುಮಕೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದೆ.
ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿರುವ ಜೆ ಶ್ವೇತಾಕುಮಾರ್ ಅವರಿಗೂ ನೋಟೀಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಪ್ರತಿವಾದಿ ಆರೋಪಿ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿದೆ.