ಕಾರು ಮತ್ತು ಸರ್ಕಾರಿ ಬಸ್ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಬೆಳಗ್ಗೆ 11ಗಂಟೆಗೆ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ ತಮಿಳುನಾಡಿನ ವಿಳಾಸದವರು ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ಸಿನ (ಕೆಎ 31, ಎಫ್.1611) ಚಾಲಕ ಮತ್ತು ಬಸ್ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನುಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮೃತರ ವಿವರವನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ.