ತಾಲೂಕಿನ ಗೋಲಭಾವಿ ಗ್ರಾಮದ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಭಾತರದ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಭಾರತ ಸಂವಿಧಾನ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಚೇರ್ಮನ್ ಶ್ರೀಯುತ ಡಿ. ಆರ್. ಪಾಟೀಲ ಅವರು ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಚಿಂತಕ ಹಾಗೂ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ನಡೆದ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಡಿ. ಆರ್. ಪಾಟೀಲ ಅವರು, ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ನೀಡಿದೆ ಎಂದು ತಿಳಿಸಿದರು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳನ್ನೂ ಅರಿತು ಪಾಲಿಸುವುದು ಅತ್ಯಂತ ಅಗತ್ಯವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಸಮಾನ ಅವಕಾಶಗಳು ದೊರೆಯಬೇಕು. ಜಾತಿ, ಧರ್ಮ, ಭಾಷೆ ಹಾಗೂ ವರ್ಗಗಳ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶಾಲೆಯ ಮುಖ್ಯಗುರುಗಳು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶ್ರೀಯುತ ಈರಣ್ಣ ಲಟ್ಟಿ ಅವರು ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಬಾಲ್ಯದ ಜೀವನ, ಶಿಕ್ಷಣಕ್ಕಾಗಿ ಅವರು ಪಟ್ಟ ಪರಿಶ್ರಮ, ಎದುರಿಸಿದ ಸವಾಲುಗಳು ಹಾಗೂ ಸಮಾಜದ ಏಳಿಗೆಗಾಗಿ ಮಾಡಿದ ಅಪಾರ ಸಾಧನೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಶಿಕ್ಷಣವೇ ವ್ಯಕ್ತಿಯ ಬದುಕಿನಲ್ಲಿ ಬದಲಾವಣೆ ತರುವ ಶಕ್ತಿಯಾಗಿದೆ ಎಂಬುದನ್ನು ಅಂಬೇಡ್ಕರ್ ಅವರ ಜೀವನ ನಮಗೆ ಕಲಿಸುತ್ತದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಂವಿಧಾನದ ಆಶಯಗಳನ್ನು ಗೌರವಿಸುವ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಮುಖ ಘಟ್ಟವಾಗಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆರತಿ ಶಿವಾನಂದ ಜಗದಾಳ ಅವರು ಶಾಲೆಯ ಆವರಣದಲ್ಲಿ ನೆರೆದಿದ್ದ ಸುಮಾರು ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಸಂವಿಧಾನದ ಆಶಯಗಳನ್ನು ಸ್ಮರಿಸಿದರು. ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಗೌರವಿಸಿ, ಅವುಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆ ಕೈಗೊಂಡರು.
ಈ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರಾದ ಎಂ. ಪಿ. ಪಾಟೀಲ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಶಿಕ್ಷಕರಾದ ಎನ್. ಎಂ. ಅಸೂದೆ ಅವರು ವಂದನಾರ್ಪಣೆ ಸಲ್ಲಿಸಿದರು.
ಶ್ರೀಮತಿ ಎಸ್. ಬಿ. ಹಿರೇಮಠ, ಅಕ್ಕಮಹಾದೇವಿ, ಎ. ಎಂ. ಮೇತ್ರಿ, ಶಿವಾನಂದ ಕಟ್ಟಿಮನಿ, ರಾಜೇಶ್ವರಿ ಕೋರಿ ಹಾಗೂ ಕುಮಾರಿ ಪಲ್ಲವಿ ಹಣಗಂಡಿ ಸೇರಿದಂತೆ ಗುರುಮಾತೆಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



