ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಮುರನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಸನೂರು ಪುಕೆ ಹಾಗೂ ಬನ್ನಿದಿನ್ನಿ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸ್ವಚ್ಛ ಭಾರತ ಮಿಷನ್ (SBM) ಯೋಜನೆಯಡಿ ಮನೆ ಮನೆಗೆ ಭೇಟಿ ನೀಡಿದ ಅಧಿಕಾರಿಗಳು, ಗ್ರಾಮಸ್ಥರಿಗೆ ಶೌಚಾಲಯ ಬಳಕೆಯ ಮಹತ್ವ, ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಸ್ವಚ್ಛತೆ, ಆರೋಗ್ಯಕರ ಪರಿಸರ ನಿರ್ಮಾಣದ ಕುರಿತು ಜಾಗೃತಿ ಮೂಡಿಸಿದರು. ಸ್ವಚ್ಛತೆಯನ್ನು ದೈನಂದಿನ ಜೀವನದ ಭಾಗವಾಗಿಸಿಕೊಂಡು ಸ್ವಚ್ಛ ಹಾಗೂ ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಸಹಕರಿಸುವಂತೆ ಮನವಿ ಮಾಡಿದರು.
ಇದೆ ವೇಳೆ VBG RAMG ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ವೈಯಕ್ತಿಕ ಕಾಮಗಾರಿಗಳನ್ನು ಪರಿಶೀಲಿಸಿದ ಸಿಇಒ ಅವರು ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿದರು. ಯೋಜನೆಯ ಉದ್ದೇಶ, ಲಭ್ಯವಿರುವ ಸೌಲಭ್ಯಗಳು ಹಾಗೂ ವೈಯಕ್ತಿಕ ಕಾಮಗಾರಿಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಮನೆ ಮನೆಗೆ ಕರಪತ್ರಗಳನ್ನು ವಿತರಿಸುವ ಮೂಲಕ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲಾಯಿತು.
ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆ, ಸ್ವಚ್ಛ ಗ್ರಾಮಗಳ ನಿರ್ಮಾಣ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳ ಈ ಭೇಟಿ ಮಹತ್ವ ಪಡೆದಿದೆ.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಪ್ನ ನಾಯಕ ಸೇರಿದಂತೆ ಟಿಸಿ, ಟಿಐಇಸಿ, ಟಿಎಇಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.



