ಟ್ರ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ಸಿನಲ್ಲಿದ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. 8 ಮಂದಿಗೂ ಅಧಿಕ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ವೇತಾ ಪಾಟೀಲ(16), ಸಾಗರ ಕಡಕೋಳ(17), ಗೋವಿಂದ ಜಂಬಗಿ(13), ಬಸವರಾಜ್ ಕೊಟಗಿ(17) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಭಾನುವಾರ ತಡರಾತ್ರಿ 12ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟಿರುವವರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ
ಅಲಗೂರಿನ ವರ್ಧಮಾನ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.