ಕಾಲೇಜಿನಲ್ಲಿ ನಡೆಯುವ ರ‍್ಯಾಗಿಂಗ್‌ಗೆ ಬೇಸತ್ತು ವಿದ್ಯಾರ್ಥಿಯೊಬ್ಬರು ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿರುವ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜಲಿ ಅವರು ಡೆತ್‌ನೋಟ್‌ನಲ್ಲಿ ಮೂವರು ವಿದ್ಯಾರ್ಥಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಬರೆದಿದ್ದು, ಆ ಮೂವರೇ ತಮ್ಮ ಸಾವಿಗೆ ಕಾರಣವೆಂದು ಹೇಳಿದ್ದಾರೆ.
“ವರ್ಷಾ, ಪ್ರದೀಪ್ ಮತ್ತು ಮತ್ತೊಬ್ಬ ವಿದ್ಯಾರ್ಥಿ ನನ್ನ ಬದುಕಿನಲ್ಲಿ ಸಾಕಷ್ಟು ಪರಿಣಾಮ ಬೀರಿದ್ದಾರೆ. ನನ್ನನ್ನು ಮಾನಸೀಕವಾಗಿ ಕುಗ್ಗಿಸಿದ್ದಾರೆ. ನನ್ನ ಬದುಕಿಗೆ ಮಾರಕವಾಗಿದ್ದಾರೆ. ಇವರೇ ನನ್ನ ಸಾವಿಗೆ ಕಾರಣ. ಅವರನ್ನು ಸುಮ್ಮನೆ ಬಿಡಬಾರದು” ಎಂದು ಬರೆದಿದ್ದಾರೆ.
ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.