ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ಲನ್ನು ಪಾವತಿ ಮಾಡದಿದ್ದರೆ ಕಾರ್ಖಾನೆಗಳ ಮಾಲಿಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ರೈತರು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಗಮನ ಸೆಳೆಯಲು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ಕಬ್ಬು ಬೆಳೆಗಾರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ, “ಪ್ರಸಕ್ತ ಹಂಗಾಮಿನಲ್ಲಿ ಬಾಗಲಕೋಟೆ ಜಿಲ್ಲೆಯ ಹದಿಮೂರು ಸಕ್ಕರೆ ಕಾರ್ಖಾನೆಗಳು ಸಾವಿರದ ನಲವತ್ತು ಕೋಟಿ ರೂ ಕಬ್ಬಿನ ಬಾಕಿ ಉಳಿಸಿಕೊಂಡಿವೆ. ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳು ರೈತರಿಗೆ 24 ಗಂಟೆಯಲ್ಲಿ ಬಿಲ್ ಪಾವತಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಆಗ್ರಹಿಸಿದರು.
ರೈತ ಸಂಘದ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, “ಸಕ್ಕರೆ ಕಾರ್ಖಾನೆಗಳಲ್ಲಿ ಇರುವ ಸಕ್ಕರೆಯನ್ನು ಮುಟ್ಟುಗೋಲು ಹಾಕಿಕೊಂಡು ಬಾಕಿ ಬಿಲ್ ಪಾವ ತಿಸಲು ಜಿಲ್ಲಾಡಳಿತ ಮುಂದಾಗಬೇಕೆಂದು” ಒತ್ತಾಯಿಸಿದರು.
ಇದನ್ನೂ ಓದಿ: ಬಾಗಲಕೋಟೆ | ಸಾಹಿತಿಗಳು ಸ್ವಾವಲಂಬಿಗಳಾಗಬೇಕು: ಶ್ರೀಧರ ಬಳಿಗಾರ
ರೈತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ ಎಂ ರೈತರಿಗೆ ಭರವಸೆ ನೀಡಿದರು. ಜಿಲ್ಲಾಧಿಕಾರಿ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂತೆಗೆದುಕೊಂಡರು.
ಈ ವೇಳೆ ರೈತ ಮುಖಂಡರಾದ ಇರಪ್ಪ ಹಂಚಿನಾಳ, ನಾಗೇಶ ಗೊಳಶೆಟ್ಟಿ, ಬಸವರಾಜ, ಮುತ್ತಪ್ಪ ಹಿರೇಕುಂಬಿ, ಸಿದ್ದನಗೌಡ ಪಾಟೀಲ, ತಿಪ್ಪಣ್ಣ ಮೇಟಿ ಸೇರಿದಂತೆ ನೂರಾರು ರೈತರು ಇದ್ದರು.