ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಅಕ್ರಮದ ವಿರುದ್ಧ ಬಾಗಲಕೋಟೆ ಜಿಲ್ಲಾಡಳಿತ ಕಾರ್ಯಾಚರಣೆ ತೀವ್ರಗೊಳಿಸಿದೆ.
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಹಾಗೂ ಸಂಗ್ರಹಿಸಿ ಮಾರಾಟ ಮಾಡುವವರ ವಿರುದ್ಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಾನೂನು ಕ್ರಮ ಕೈಗೊಂಡಿದ್ದು, ಎರಡು ಸಾಲುಗಳ ಅವಧಿಯಲ್ಲಿ ಒಟ್ಟು 77 ಪ್ರಕರಣಗಳನ್ನು ದಾಖಲಿಸಿದೆ. 53 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಬಡ ಕುಟುಂಬಗಳ ಆಹಾರ ಭದ್ರತೆಗಾಗಿ ನೀಡುವ ಈ ಅಕ್ಕಿ ಅಕ್ರಮವಾಗಿ ಕಾಳಸಂತೆಯ ಪಾಲಾಗುವುದನ್ನು ತಡೆಯಲು ಆಹಾರ ಇಲಾಖೆ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
2025-26ನೇ ಸಾಲಿನಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಣೆ ಮತ್ತು ಸಂಗ್ರಹಕ್ಕೆ ಸಂಬಂಧಿಸಿದಂತೆ 37 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ವೇಳೆ 54,34,304 ರೂ. ಮೌಲ್ಯದ 1,555.65 ಕ್ವಿಂಟಾಲ್ ಅಕ್ಕಿ ಹಾಗೂ 52.15 ಲಕ್ಷ ರೂ. ಮೌಲ್ಯದ 24 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ 64 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
2026-27ನೇ ಸಾಲಿನಲ್ಲಿ ಈವರೆಗೆ 40 ಪ್ರಕರಣಗಳು ಪತ್ತೆಯಾಗಿವೆ. ಈ ಕಾರ್ಯಾಚರಣೆಯಲ್ಲಿ 37,73,152 ರೂ. ಮೌಲ್ಯದ 1,489.79 ಕ್ವಿಂಟಾಲ್ ಅಕ್ಕಿ ಹಾಗೂ ಅಂದಾಜು 95.45 ಲಕ್ಷ ರೂ. ಮೌಲ್ಯದ 29 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 40 ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಕುಟುಂಬಗಳಿಗೆ ತಲುಪಬೇಕಾದ ಆಹಾರ ಧಾನ್ಯವನ್ನು ಅಕ್ರಮವಾಗಿ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಖರೀದಿಸುವುದು ಕಾನೂನುಬಾಹಿರವಾಗಿದೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ಎಚ್ಚರಿಕೆ ನೀಡಿದ್ದಾರೆ.
ಪಡಿತರ ಅಕ್ಕಿ ಅಕ್ರಮವಾಗಿ ಸಾಗಣೆ ಅಥವಾ ಸಂಗ್ರಹವಾಗುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ನಿಗಾ ವಹಿಸಿದ್ದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕ್ರಮ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ತಲುಪಬೇಕಾದ ಉಚಿತ ಆಹಾರ ಧಾನ್ಯ ದುರುಪಯೋಗವಾಗದಂತೆ ತಡೆಯುವುದು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಾರದರ್ಶಕತೆಯನ್ನು ಕಾಪಾಡುವುದು ಜಿಲ್ಲಾಡಳಿತದ ಉದ್ದೇಶವಾಗಿದೆ.





