ಸತ್ಯಶೋಧಕ ಸಂಘ ಕರ್ನಾಟಕ ಬಾಗಲಕೋಟೆ ನಗರ ಘಟಕದ ವತಿಯಿಂದ ಭಾರತ ಸಂವಿಧಾನದ ಶಿಲ್ಪಿ ಭಾರತರತ್ನ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ʼಅಂಬೇಡ್ಕರ್ ಹಬ್ಬʼ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಗರದ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪರಶುರಾಮ ಮಹಾರಾಜನವರ, “ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜದ ಹಿಂದುಳಿದ ವರ್ಗಗಳ ಉದ್ಧಾರಕ್ಕಾಗಿ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಸಲ್ಲಿಸಿದ ಕೊಡುಗೆ ಅಪಾರವಾಗಿದೆ ಎಂದರು. ಅವರ ಆದರ್ಶಗಳು, ಚಿಂತನೆಗಳು ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಇಂದಿನ ಯುವಜನತೆ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ” ಎಂದು ಅಭಿಪ್ರಾಯಿಸಿದರು.
ಶಿಕ್ಷಣವೇ ಸಾಮಾಜಿಕ ಪರಿವರ್ತನೆಯ ಶಕ್ತಿ ಎಂಬುದನ್ನು ಡಾ. ಅಂಬೇಡ್ಕರ್ ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಅವರ ಜೀವನ ಸಂದೇಶವನ್ನು ಮಾದರಿಯಾಗಿ ತೆಗೆದುಕೊಂಡು ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದಿಂದ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ ಸಂಘದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಲು ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದು, ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಕಾಶ್ ತಪ ಶೆಟ್ಟಿ, ಸುತಾರ್ ಪೋಲಿಸ್ ಉಪಾಧೀಕ್ಷಕರು ಬಾಗಲಕೋಟೆ ವಿಭಾಗ, ಅರುಣ್ ಗರಸಂಗಿ ಹಾಗೂ ಸತ್ಯಶೋಧಕ ಸಂಘ ಕರ್ನಾಟಕದ ನಗರ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕರು, ಪೋಷಕರು, ಇದ್ದರು.





