ಬಾಗಲಕೋಟೆ ಜಿಲ್ಲೆಯಲ್ಲಿ ಸರ್ಕಾರದ ಯಾವುದೇ ಯೋಜನೆ ಅಥವಾ ಅಭಿವೃದ್ಧಿ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನೋಡಿಕೊಂಡು ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಇಲಾಖೆಗಳು ನಿಗದಿತ ಗುರಿಗಳನ್ನು ಕಡ್ಡಾಯವಾಗಿ ಸಾಧಿಸಬೇಕು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ತಲುಪುವಂತೆ ಕ್ಷೇತ್ರಮಟ್ಟದಲ್ಲಿ ನಿರಂತರ ಮೇಲ್ವಿಚಾರಣೆ ನಡೆಸಬೇಕು” ಎಂದು ಸೂಚಿಸಿದರು.
“ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಜತೆಗೆ, ಮಳೆ ಅಭಾವದಿಂದ ಉದ್ಯೋಗ ಕಳೆದುಕೊಂಡ ಕೃಷಿ-ಕೂಲಿ ಕಾರ್ಮಿಕರಿಗೆ ವಿಬಿ ಜಿ ರಾಮ್‌ಜಿ ಯೋಜನೆ ಮೂಲಕ ಉದ್ಯೋಗ ಭದ್ರತೆ ಒದಗಿಸಬೇಕು” ಎಂದು ತಿಳಿಸಿದರು.
“ಆರೋಗ್ಯ ಇಲಾಖೆಯು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಔಷಧ ಹಾಗೂ ಅಗತ್ಯ ಸೌಲಭ್ಯಗಳ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ತಾಯಿ-ಮಗು ಆರೋಗ್ಯ, ಲಸಿಕಾ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಹಾವು ಕಡಿತ ಪ್ರಕರಣಗಳಲ್ಲಿ ತ್ವರಿತ ಚಿಕಿತ್ಸೆ ದೊರೆಯುವ ವ್ಯವಸ್ಥೆ ಕಲ್ಪಿಸಿ ಮರಣ ಪ್ರಮಾಣ ತಗ್ಗಿಸಲು ಕ್ರಮವಹಿಸಬೇಕು” ಎಂದರು.
ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಎಸ್‌ಎಸ್‌ಎಲ್‌ಸಿ-ಪಿಯುಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಕಡಿಮೆ ಫಲಿತಾಂಶ ದಾಖಲಿಸಿದ ಶಾಲೆಗಳ ವಿರುದ್ಧ ಕೈಗೊಂಡ ಕ್ರಮ ಕುರಿತು ಪ್ರಶ್ನಿಸಿದಾಗ, ಈಗಾಗಲೇ 25 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ತಾಂತ್ರಿಕ ಕೃಷಿ ಸಲಹೆಗಳನ್ನು ಸಮಯಕ್ಕೆ ತಲುಪಿಸಬೇಕು. ಬೆಳೆವಿಮೆ, ಬೆಳೆ ಸಮೀಕ್ಷೆ ಮತ್ತು ತೋಟಗಾರಿಕೆ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡುವಂತೆ ನಿರ್ದೇಶಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಷ್ಟಿಸಿ, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾಮಗಾರಿ ಹಾಗೂ ಸ್ವಚ್ಛತಾ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಕೀಲೆಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ವಸತಿ ನಿಲಯಗಳಲ್ಲಿ ಮೆನು ಪ್ರಕಾರ ಗುಣಮಟ್ಟದ ಆಹಾರ ಪೂರೈಕೆಯನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹೀರೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.





