ರೈತ ಮುಖಂಡ ಯಲ್ಲಪ್ಪ ಹೆಗಡೆ ಅವರ ಮೇಲೆ ಹಲ್ಲೆ ಮಾಡಿದ ಹಾಗೂ ಹಲ್ಲೆ ಮಾಡಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಹಾಲುಮತ ಯುವಸೇನೆ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಮಖಂಡಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
“ಸಾಮಾಜಿಕ ಹೋರಾಟಗಾರ, ರೈತ ಮುಖಂಡ ಯಲ್ಲಪ್ಪ ಹೆಗಡೆ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೀಳಗಿ ಮತಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮಾಜಿ ಸಚಿವ ಮುರಗೇಶ್ ನಿರಾಣಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರಿಂದ, ಮುರಗೇಶ್ ನಿರಾಣಿಯು ಯಲ್ಲಪ್ಪ ಹೆಗಡೆಯವರ ವಿರುದ್ದ ಐದು ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆಗಸ್ಟ್ 28ರಂದು ಯಲ್ಲಪ್ಪ ಹೆಗಡೆಯವರು ಬೀಳಗಿ ಪಟ್ಟಣದಲ್ಲಿ ಭಿಕ್ಷಾಟನೆ ಅಭಿಯಾನ ಪ್ರತಿಭಟನೆ ಹಮ್ಮಿಕೊಂಡಿದ್ದರು” ಎಂದರು.
ಯಲ್ಲಪ್ಪ ಹೆಗಡೆಯವರು ಪ್ರತಿಭಟನೆಗೆ ಮುದೋಳದಿಂದ ಬೀಳಗಿ ಪಟ್ಟಣಕ್ಕೆ ತೆರಳುವಾಗ ಮಾರ್ಗ ಮಧ್ಯದಲ್ಲಿ ದುಷ್ಕರ್ಮಿಗಳು ಯಲ್ಲಪ್ಪ ಹೆಗಡೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅನ್ಯಾಯ, ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ದ ಹೋರಾಟ ಮಾಡುವ ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆಯವರ ಮೇಲೆ ಹಲ್ಲೆ ಮಾಡಿರುವುದರಿಂದ ಕರ್ನಾಟಕವೇ ತಲೆ ತಗ್ಗಿಸುವಂತಾಗಿದೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವವರನ್ನು ಹತ್ತಿಕ್ಕುವ ಕೃತ್ಯ ನಡೆಯುತ್ತಿರುವುದು ಖಂಡನೀಯ. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಹಾಲುಮತ ಯುವಸೇನೆ ಸಂಘಟನೆಯ ಕಾರ್ಯಕರ್ತರು, ಹೋರಾಟಗಾರರು ಇದ್ದರು.