ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಬ್ಯಾಂಕ್‌ಗಳಿಗೆ ಅನಗತ್ಯವಾಗಿ ಅಲೆದಾಡಿಸದೆ, ಬಾಕಿ ಅರ್ಜಿಗಳನ್ನು 15 ದಿನಗಳೊಳಗಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಗಲಕೋಟೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣಿ ಬ್ಯಾಂಕ್‌ನ ತ್ರೈಮಾಸಿಕ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾಲದ ಅರ್ಜಿದಾರರಿಗೆ ಅಗತ್ಯ ದಾಖಲೆಗಳ ಬಗ್ಗೆ ಆರಂಭದಲ್ಲಿಯೇ ಮಾಹಿತಿ ನೀಡಿ, ಸಣ್ಣಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಡೆಹಿಡಿಯಬಾರದು.
ವಿಶೇಷವಾಗಿ ಯೂನಿಯನ್ ಬ್ಯಾಂಕ್‌ನಲ್ಲಿ ಹೆಚ್ಚಿನ ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಸಣ್ಣ ಉದ್ಯಮಿಗಳು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು. ಬರಪೀಡಿತ ಜಿಲ್ಲೆಯ ರೈತರೊಂದಿಗೆ ಬ್ಯಾಂಕ್ ಅಧಿಕಾರಿಗಳು ಮಾನವೀಯವಾಗಿ ವರ್ತಿಸಿ, ಸಾಲ ಮರುಪಾವತಿಗೆ ಅನುಕೂಲವಾಗುವಂತೆ ವಿಶೇಷ ಶಿಬಿರಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.
ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ದಿಶಾ ಸಭೆಗೂ ಮುನ್ನ ಎಲ್ಲ ಬಾಕಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ರಾಜಕುಮಾರ ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.



