ರಾಜ್ಯದ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಉದ್ಯೋಗ ಸೇತು’ ಏಕೀಕೃತ ಡಿಜಿಟಲ್ ವೇದಿಕೆಯಲ್ಲಿ ಜಿಲ್ಲೆಯ ಆಸಕ್ತ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ನೇರ ಸಂಪರ್ಕ ಕಲ್ಪಿಸುವ ಈ ವೇದಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ತರಬೇತಿ ಹಾಗೂ ಕೆಲಸದ ಅನುಭವದ ವಿವರಗಳನ್ನು ದಾಖಲಿಸಿಕೊಳ್ಳಬಹುದು. ಇದರಿಂದ ಅರ್ಹತೆಗೆ ಅನುಗುಣವಾಗಿ ಉದ್ಯೋಗಾವಕಾಶಗಳನ್ನು ಗುರುತಿಸಲು ಅನುಕೂಲವಾಗಲಿದೆ.
ಅಲ್ಲದೆ, ಸ್ವಂತ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಯುವಜನರಿಗೆ ಅಗತ್ಯ ತರಬೇತಿ, ಮಾರ್ಗದರ್ಶನ ಹಾಗೂ ವಿವಿಧ ಸಾಲ ಮತ್ತು ಸಹಾಯಧನ ಯೋಜನೆಗಳ ಮಾಹಿತಿಯನ್ನೂ ಈ ವೇದಿಕೆಯಲ್ಲಿ ಒದಗಿಸಲಾಗುತ್ತದೆ.ಮುಖ್ಯವಾಗಿ, ಯುವನಿಧಿ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಉದ್ಯೋಗ ಸೇತು ಪೋರ್ಟಲ್‌ನಲ್ಲಿಯೂ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೋಂದಣಿ ವೆಬ್‌ಸೈಟ್:https://yuvayogasehthu.karnataka.gov.in/kn/signupಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 118 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ 135, ಜಿಲ್ಲಾಡಳಿತ ಭವನ, ಬಾಗಲಕೋಟೆ ಇಲ್ಲಿ ಸಂಪರ್ಕಿಸಬಹುದು.ದೂರವಾಣಿ: 08354-295210, 8147111236.



