ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ, ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 15ರಂದು ನಡೆಯಲಿರುವ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7,362 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ 17 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪರೀಕ್ಷಾ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಡೊಂಬರ ಮಾತನಾಡಿ, “ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಿಲ್ಲಾಡಳಿತ ಭವನದಿಂದ ವೀಕ್ಷಿಸಲು ಅನುಕೂಲವಾಗುವಂತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದರು.
ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ವ್ಯವಸ್ಥೆಯ ಅನುಷ್ಠಾನ ಹಾಗೂ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಿ, ನಿರಂತರ ನಿಗಾ ವಹಿಸುವ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರಶೇಖರ ಪಾಟೀಲ, ಜಿಲ್ಲಾ ಎನ್‌ಐಸಿ ಅಧಿಕಾರಿ ತಲ್ಲಾ ಜಯಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




