ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ, ತೆರಿಗೆ ಸಂಗ್ರಹಣೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತಾ ಕಾರ್ಯಗಳು, ನರೇಗಾ ಯೋಜನೆ, ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಇತರೆ ಪ್ರಮುಖ ಕಾಮಗಾರಿಗಳನ್ನು ನಿರ್ಲಕ್ಷಿಸಬಾರದು ಎಂದು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿ, “ಕ್ಷೇತ್ರ ಮಟ್ಟದಲ್ಲಿ ನಿಯಮಿತವಾಗಿ ಭೇಟಿ ನೀಡಿ, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಸಮಯೋಚಿತವಾಗಿ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಸೂಚಿಸಿದರು.
“ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿ ತೆರಿಗೆ ಕೇವಲ ಶೇಕಡಾ 15 ರಷ್ಟು ಮಾತ್ರ ವಸೂಲಾತಿಯಾಗಿದ್ದು, ಇಲ್ಲಿಯವರೆಗೆ ಶೇಕಡಾ 25ರಷ್ಟಾದರೂ ವಸೂಲಾಗಬೇಕಿತ್ತು. ಇ-ತಂತ್ರಾಂಶದಡಿ 11ಎ ಮತ್ತು 11ಬಿ ಸುಪರ್ದಿನಲ್ಲಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಕೂಡಲೇ ಡೆಲಿವರಿ ಮಾಡಬೇಕು” ಎಂದು ಸೂಚಿಸಿದರು.
“15ನೇ ಹಣಕಾಸಿನಡಿ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಖರ್ಚಾಗದೆ ಉಳಿಸಿಕೊಂಡಿದ್ದು, ಆಗಸ್ಟ್ 15ರೊಳಗೆ ನಿಯಮಾನುಸಾರ ಖರ್ಚು ಬರಿಸತಕ್ಕದ್ದು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಾಸ ಸ್ಥಳದ ದೃಢೀಕರಣ ಪತ್ರ ನೀಡಬೇಕು” ಎಂದು ಆಗ್ರಹಿಸಿದರು.
“ನಿಗದಿತ ಗುರಿ ಸಾಧಿಸಲು ವಿಫಲವಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ವಿಳಂಬ ಅಥವಾ ಕರ್ತವ್ಯಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದರು.
“ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಶೇ 100 ರಷ್ಟು ಗುರಿ ಸಾಧಿಸಲು ಶ್ರಮಿಸಬೇಕು” ಎಂದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್ನುವ ಬಸರಗಿಡದ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಇದ್ದರು.




