ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ, ತೋಟಗಾರಿಕೆಯಲ್ಲಿ ಯುವಕರಿಗೆ ಉದ್ಯಮಶೀಲತೆಯ ಅವಕಾಶ ಕಲ್ಪಿಸಿದಾಗ ಮಾತ್ರ ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಆರ್. ಗಿರೀಶ್ ಹೇಳಿದರು.
ಬಾಗಲಕೋಟೆ ನಗರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ 18ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಮತ್ತು ತೋಟಗಾರಿಕೆ ಪದವೀಧರರು ಉದ್ಯೋಗ ಹುಡುಕುವವರಾಗದೆ, ನವೋದ್ಯಮಿಗಳಾಗಿ ರೈತರನ್ನು ಪ್ರೋತ್ಸಾಹಿಸಬೇಕು. ತೋಟಗಾರಿಕೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ವೈಜ್ಞಾನಿಕವಾಗಿ ಕೃಷಿ ಕೈಗೊಂಡರೆ ಒಂದು ಎಕರೆ ಜಮೀನಿನಲ್ಲಿ ₹20 ಲಕ್ಷ ಆದಾಯ ಗಳಿಸುವ ಸಾಧ್ಯತೆಯಿದೆ. ಯುವಕರು ಕೃಷಿಯತ್ತ ಆಕರ್ಷಿತರಾಗುವಂತೆ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸಬೇಕು ಎಂದರು.
ಎಂಎಲ್ಸಿ ಹನುಮಂತ ಆರ್. ನಿರಾಣಿ ಮಾತನಾಡಿ, ಕೇವಲ 18 ವರ್ಷಗಳಲ್ಲಿ ತೋಟಗಾರಿಕೆ ವಿವಿ ಹಲವು ಸಂಶೋಧನೆ ಮತ್ತು ಸಾಧನೆಗಳನ್ನು ಮಾಡಿರುವುದು ಹೆಮ್ಮೆಯ ಸಂಗತಿ. ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅಗತ್ಯ ಅನುದಾನ ಹಾಗೂ ಹೆಚ್ಚುವರಿ ಭೂಮಿ ಒದಗಿಸಲು ಸರ್ಕಾರದ ಗಮನ ಸೆಳೆಯಲಾಗುವುದು. ರೈತರು ಮಣ್ಣಿನ ಫಲವತ್ತತೆ ಕಾಪಾಡಲು ಕಬ್ಬಿನ ಬದಲಾಗಿ ಪರ್ಯಾಯ ಬೆಳೆಗಳತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿ ಡಾ. ವಿಷ್ಣುವರ್ಧನ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾರತೀಯ ತೋಟಗಾರಿಕಾ ವ್ಯವಸ್ಥಾಪಕ ಸಂಸ್ಥೆಯ ನಿರ್ದೇಶಕ ಡಾ. ಎಸ್. ಸೆಂಥಿಲ್ ವಿನಾಯಗಂ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ 2026ನೇ ಸಾಲಿನ ಅತ್ಯುತ್ತಮ ಸಂಶೋಧಕ, ವಿಸ್ತರಣಾ ವಿಜ್ಞಾನಿ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ಕ್ರೀಡೆ ಮತ್ತು ಯುವಜನೋತ್ಸವದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.ವಿಸ್ತರಣಾ ನಿರ್ದೇಶಕ ಡಾ. ವೆಂಕಟೇಶಲು ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ವ್ಯವಸ್ಥಾಪನಾ ಮಂಡಳಿ ಸದಸ್ಯರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



