ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ, ವಿಳಂಬವಿಲ್ಲದೆ ಯೋಜನೆಗಳ ಸೌಲಭ್ಯ ತಲುಪಿಸಬೇಕು ಎಂದು ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೀಳಗಿ ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಜಮೀನುಗಳಲ್ಲಿ ಬೋರ್‌ವೆಲ್ ಕೊರೆಯುವ ಟೆಂಡರ್ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಲದೆ, ಅರ್ಧಕ್ಕೆ ನಿಂತಿರುವ ಅಂಬೇಡ್ಕರ್, ಬಾಬು ಜಗಜೀವನರಾಮ ಹಾಗೂ ವಾಲ್ಮೀಕಿ ಭವನಗಳ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಜಿಲ್ಲೆಯ 16 ಇಲಾಖೆಗಳು ಮಾತ್ರ ಶೇ.100ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳೂ ಗುರಿ ಸಾಧನೆಗೆ ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.
ಸಭೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಎಸ್‌ಸಿಪಿ ಯೋಜನೆಯಡಿ ₹120.75 ಕೋಟಿ ಗುರಿಗೆ ₹57.89 ಕೋಟಿ ಬಿಡುಗಡೆಯಾಗಿದ್ದು, ಶೇ.64.34 ಆರ್ಥಿಕ ಹಾಗೂ ಶೇ.87.83 ಭೌತಿಕ ಪ್ರಗತಿ ಸಾಧಿಸಲಾಗಿದೆ. ಟಿಎಸ್‌ಪಿ ಯೋಜನೆಯಡಿ ₹34.32 ಕೋಟಿ ಗುರಿಗೆ ₹13.22 ಕೋಟಿ ಬಿಡುಗಡೆಯಾಗಿದ್ದು, ಶೇ.58 ಆರ್ಥಿಕ ಹಾಗೂ ಶೇ.90 ಭೌತಿಕ ಪ್ರಗತಿ ದಾಖಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.



