ಬಾಗಲಕೋಟೆ ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಬರ ಪರಿಸ್ಥಿತಿ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳು ಜಿಲ್ಲೆಯ ಬರ ಸ್ಥಿತಿಗತಿ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲೆಯಲ್ಲಿನ ಮಳೆ ಪ್ರಮಾಣ, ತಾಲ್ಲೂಕುವಾರು ಮಳೆ ಕೊರತೆ, ಮುಂಗಾರು ಹಂಗಾಮಿನ ಪ್ರಗತಿ ಹಾಗೂ ಪ್ರಮುಖ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ನೀರಾವರಿಗೆ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸಲಾಯಿತು.
ಕೃಷಿ ಇಲಾಖೆಯು ಮುಂಗಾರು ಬಿತ್ತನೆ ಪ್ರಗತಿ, ಬೆಳೆಗಳ ಸ್ಥಿತಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ, ಬೆಳೆಹಾನಿ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿತು. ರೈತರಿಗೆ ಅಗತ್ಯ ತಾಂತ್ರಿಕ ಸಲಹೆ ಹಾಗೂ ಮಾಹಿತಿ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸಚಿವರು ಸೂಚಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಲಭ್ಯತೆ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಹಾಗೂ ನೀರಿನ ಮೂಲಗಳ ಸಂರಕ್ಷಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಗ್ರಾಮಗಳಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಪಶುಸಂಗೋಪನೆ ಇಲಾಖೆಯು ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಲಭ್ಯತೆ, ಮೇವು ಬ್ಯಾಂಕ್‌ಗಳ ಸ್ಥಿತಿ ಹಾಗೂ ಮೇವು ಸಂಗ್ರಹ ಕುರಿತು ಮಾಹಿತಿ ನೀಡಿತು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, “ಜಿಲ್ಲೆಯಲ್ಲಿ ಸರಾಸರಿ ಶೇ.19ರಷ್ಟು ಮಳೆ ಕೊರತೆ ದಾಖಲಾಗಿದ್ದು, ಗುಳೇದಗುಡ್ಡ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ಕಂಡುಬಂದಿದೆ. ಈವರೆಗೆ ಶೇ.90ರಷ್ಟು ಬಿತ್ತನೆ ಪೂರ್ಣಗೊಂಡಿದೆ” ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಎಬಿ-ಜಿ ರಾಮ್-ಜಿ ಯೋಜನೆಯಡಿ ಅವಕಾಶವಿದ್ದು, ಮೊದಲ ಹಂತದಲ್ಲಿ 450 ಕೃಷಿ ಹೊಂಡಗಳನ್ನು ನಿರ್ಮಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಜೆ.ಟಿ. ಪಾಟೀಲ, ಸಿದ್ದು ಸವದಿ, ಜಗದೀಶ ಗುಡಗುಂಟಿ, ಉಮೇಶ ಮೇಟಿ ಹಾಗೂ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.




