ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರೇಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ವ್ಯವಸ್ಥೆ ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಶೈಕ್ಷಣಿಕ ವಾತಾವರಣ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಆವರಣದಲ್ಲಿರುವ ಸಾರ್ವಜನಿಕ ನೀರಿನ ಟ್ಯಾಂಕ್ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಾಲೆಯ ಸುಗಮ ನಿರ್ವಹಣೆಗೆ ಅಡ್ಡಿಯಾಗದಂತೆ ಟ್ಯಾಂಕ್ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಶಾಲೆಯಲ್ಲಿನ ಶೈಕ್ಷಣಿಕ ವ್ಯವಸ್ಥೆ, ವಿದ್ಯಾರ್ಥಿಗಳ ಹಾಜರಾತಿ, ಮೂಲಸೌಕರ್ಯ, ಶಾಲಾ ಪರಿಸರ ಹಾಗೂ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿ, ಕಲಿಕೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಶಾಲೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳ ಆಸಕ್ತಿಗಳ ಕುರಿತು ಮಾಹಿತಿ ಪಡೆದರು.
ಉತ್ತಮವಾಗಿ ಅಧ್ಯಯನ ಮಾಡುವ ಮೂಲಕ ಭವಿಷ್ಯದಲ್ಲಿ ಉನ್ನತ ಗುರಿ ಸಾಧಿಸಬೇಕು. ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಹಾಗೂ ಸಿಇಒ ಪ್ರೋತ್ಸಾಹಿಸಿದರು.
ಅಮೃತ ಸರೋವರ ಕಾಮಗಾರಿ ಪರಿಶೀಲನೆ
ಇದೇ ಸಂದರ್ಭದಲ್ಲಿ ಆಗಸಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಂಗಪ್ಪ, ಅಮೃತ ಸರೋವರ ಯೋಜನೆಯಡಿ ಕೆರೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಕೆರೆಯ ನೀರು ಸಂಗ್ರಹಣ ಸಾಮರ್ಥ್ಯ, ಮಳೆ ನೀರು ಸಂಗ್ರಹಣೆ ಹಾಗೂ ಹೆಚ್ಚುವರಿ ನೀರು ಹರಿದುಹೋಗುವ ವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆರೆಯ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುವಂತೆ ಹಾಗೂ ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸೀತಾರಾಮ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಆಕಾಶ ವಂದೇ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ ಹಾಗೂ ಸರ್ವ ಶಿಕ್ಷಣ ಅಭಿಯಾನದ ಡಿವೈಪಿಸಿ ಪ್ರಮೋದಿನಿ ಬಾಳೂಲವಾಡಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.





