ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಬೇಸಿಗೆಯ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಲಭ್ಯವಿರುವ ನೀರನ್ನು ಮಿತವಾಗಿ ಬಳಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ರೈತರು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಗುರುವಾರ ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್‌ನಿನೋ ಪರಿಣಾಮದಿಂದ ಉಷ್ಣಾಂಶ ಹೆಚ್ಚಳ, ಆವಿಯಾಗುವಿಕೆ ಪ್ರಮಾಣ ಏರಿಕೆ ಹಾಗೂ ಮಳೆಯ ಅನಿಶ್ಚಿತತೆ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಸಂರಕ್ಷಣೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.
ರೈತರು ಹೊಸದಾಗಿ ಕಬ್ಬು, ಭತ್ತ ಸೇರಿದಂತೆ ಹೆಚ್ಚು ನೀರು ಬೇಡುವ ಬೆಳೆಗಳನ್ನು ಬೆಳೆಯದಂತೆ ಸಲಹೆ ನೀಡಿದ ಅವರು, ಈಗಾಗಲೇ ಬೆಳೆದಿರುವ ಬೆಳೆಗಳಿಗೆ ಹನಿ ಮತ್ತು ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಂಡು ನೀರನ್ನು ಸಮರ್ಪಕವಾಗಿ ಬಳಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿರುವ ಸುಮಾರು 16 ಲಕ್ಷ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಜಲಮೂಲಗಳನ್ನು ಸಂರಕ್ಷಿಸಬೇಕು. ವಾಹನ ತೊಳೆಯುವುದು, ರಸ್ತೆ ಸ್ವಚ್ಛಗೊಳಿಸುವುದು ಹಾಗೂ ಕಟ್ಟಡ ನಿರ್ಮಾಣದಂತಹ ಅನಗತ್ಯ ಕೆಲಸಗಳಿಗೆ ಕುಡಿಯುವ ನೀರು ಬಳಸಬಾರದು. ನೀರಿನ ಸೋರಿಕೆ ಕಂಡುಬಂದಲ್ಲಿ ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಬುಧವಾರ ಮತ್ತು ಭಾನುವಾರ ನದಿ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತಿದ್ದು, ನೀರಿನ ಸಂರಕ್ಷಣೆಗೆ ರೈತರು, ಕೈಗಾರಿಕೋದ್ಯಮಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಗಜಾನನ ಬಾಲೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



