ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಹಾಗೂ ಬರಹಗಳನ್ನು ಪ್ರಕಟಿಸಿರುವ ರವಿ ಹಂಜ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ವಿವಾದಿತ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು, ನಿಷೇಧಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಗ್ರಹಿಸಿದರು.
ಬಾಗಲಕೋಟೆ ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶ ಹಾಗೂ ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರವೃತ್ತಿಗಳಿಗೆ ಕಡಿವಾಣ ಹಾಕಬೇಕು ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಜಿ.ಎನ್. ಪಾಟೀಲ ಮಾತನಾಡಿ, ಬಸವಣ್ಣನವರ ಘನತೆಗೆ ಧಕ್ಕೆ ತರುವ ಹೇಳಿಕೆಗಳು ಹಾಗೂ ‘ಬಸವ ಮಂಟಪ’ ಕೃತಿಯಲ್ಲಿನ ಆಕ್ಷೇಪಾರ್ಹ ಬರಹಗಳನ್ನು ಮಹಾಸಭೆ ತೀವ್ರವಾಗಿ ಖಂಡಿಸುತ್ತದೆ. ರವಿ ಹಂಜಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ವಿ.ವಿ. ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮಹಾಸಭೆಯ ಮುಖಂಡರು ಉಪಸ್ಥಿತರಿದ್ದರು.



