ರೈತರ ಕಬ್ಬಿನ ಹಣವನ್ನು ನಿಗದಿತ ಅವಧಿಯೊಳಗೆ ಪಾವತಿಸುವುದು ಕಾರ್ಖಾನೆಗಳ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಬಾಕಿ ಮೊತ್ತದ ತ್ವರಿತ ಪಾವತಿ ಮಾಡಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಬಾಕಿ ಉಳಿದಿರುವ ಬಿಲ್ ಪಾವತಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ರೈತರ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆ ಆಗದಂತೆ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಕುಂದರಗಿ ಗೇಮ್ ಶುಗರ್ಸ್ ಮತ್ತು ಹಿರೇಪಡಸಲಗಿಯ ಜಮಖಂಡಿ ಶುಗರ್ಸ್ ಕಾರ್ಖಾನೆಗಳು ಒಟ್ಟು ₹13.74 ಕೋಟಿ ಬಾಕಿ ಉಳಿಸಿಕೊಂಡಿದ್ದು, ಬಾಕಿ ಹಣವನ್ನು ಕೂಡಲೇ ಪಾವತಿಸಿ ಎಂದು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.
“ಸರ್ಕಾರ ಪ್ರತಿ ಟನ್‌ಗೆ 50 ಸಹಾಯಧನ ಬಿಡುಗಡೆ ಮಾಡಿದ್ದು, ಅದನ್ನು ಕಾರ್ಖಾನೆಗಳು ರೈತರಿಗೆ ಪಾವತಿಸಿವೆ. ಕಾರ್ಖಾನೆಯಿಂದ ಸಂದಬೇಕಿದ್ದ 50 ರೂ ಸಹಾಯಧನವನ್ನು ಕೇವಲ 5 ಕಾರ್ಖಾನೆಗಳು ಪಾವತಿಸಿದ್ದು, ಉಳಿದ 9 ಕಾರ್ಖಾನೆಗಳು ಬಾಕಿ ಪಾವತಿಗೆ ಮುಂದಾಗಬೇಕು” ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಸಿದ್ದಾರ್ಥ್ ಗೋಯಲ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಂಟಿ ಕೃಷಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಇದ್ದರು.





