ಉತ್ತರಾಖಂಡದ ಹಲ್ದ್ವಾನಿಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಿಸಿ’ ಹೋಮ-ಹವನ ನಡೆಸಿರುವ ಕೃತ್ಯವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ಬಾಗಲಕೋಟೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ನಗರದ ಜಿಲ್ಲಾ ಆಡಳಿತ ಭವನದ ಮುಂಭಾಗ ಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಪರಶುರಾಮ್ ಕಾಂಬಳೆ, “ಜಾತಿ ಆಧಾರಿತ ಅಸ್ಪೃಶ್ಯತೆ ಆಚರಣೆಯ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಮಾನಿಸಲಾಗಿದೆ. ಇದು ಖರ್ಗೆ ಅವರಿಗೆ ಮಾತ್ರ ಮಾಡಿದ ಅವಮಾನವಲ್ಲ, ಶೋಷಿತ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತಂದ ಕೃತ್ಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ಜಾರಿಗೆ ಬಂದು 77 ವರ್ಷಗಳಾದರೂ ದೇಶದಲ್ಲಿ ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯದಂತಹ ಅನಿಷ್ಟ ಆಚರಣೆಗಳು ಮುಂದುವರಿದಿರುವುದು ವಿಷಾದನೀಯ. ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಮಾಜದಲ್ಲಿ ಸಮಾನತೆ ಮತ್ತು ಸಹಬಾಳ್ವೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ಪ್ರತಿಭಟನಾಕಾರರು ಹೇಳಿದರು.
ಹಿರಿಯ ದಲಿತ ಮುಖಂಡ ಶ್ರೀಶೈಲ ಛಲವಾದಿ ಮಾತನಾಡಿ,ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿ ಹೋಮ-ಹವನ ನಡೆಸಿದ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಅನ್ವಯವಾಗುವ ಕಾನೂನುಗಳಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ರಾಜು ಮನ್ನಿಕೆರಿ,ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ, ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಆಶಾಬೆಗಂ ಬಿರಾದಾರ, ಜಿಲ್ಲಾ ಮುಖಂಡ ಎಚ್.ಎನ್. ನೀಲನಾಯಕ, ಜಿಲ್ಲಾ ಸಂಘಟನಾ ಸಂಚಾಲಕ ರಮೇಶ ಅನಗಮಾಡಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಸಂಚಾಲಕ ಕಾಶಿಂಅಲಿ ಗೋರೆ ಸೇರಿದಂತೆ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.




