ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಆದ್ಯತೆ ನೀಡಬೇಕು. ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗಿ ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಮುಂದಾಗಬೇಕು ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ನಗರದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಹ್ಯಾಂಡ್‌ಬಾಲ್ ಮತ್ತು ಬಾಗಲಕೋಟೆ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆ ಮಕ್ಕಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತದೆ. ಕ್ರೀಡಾಕೂಟಗಳು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಗಳಾಗಿದ್ದು, ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಜಿಲ್ಲೆಯಲ್ಲಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಅವರಿಗೆ ಅಗತ್ಯ ತರಬೇತಿ, ಸೌಲಭ್ಯ ಹಾಗೂ ಪ್ರೋತ್ಸಾಹ ಒದಗಿಸಬೇಕು. ಗ್ರಾಮೀಣ ಭಾಗದ ಮಕ್ಕಳಿಗೂ ಕ್ರೀಡೆಯಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಮಾನ ಅವಕಾಶ ಕಲ್ಪಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತೆ ಉತ್ತೇಜಿಸಬೇಕು ಎಂದು ಹೇಳಿದರು.
ಗ್ರಾಮೀಣ ಯುವಕರಿಗೆ ಭಾರತ ಜೋಡೊ ಸಂಘಗಳ ಮೂಲಕ ವೇದಿಕೆ
ಗ್ರಾಮೀಣ ಭಾಗದ ಯುವಕರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭಾರತ ಜೋಡೊ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಘಗಳ ಮೂಲಕ ಯುವಕರನ್ನು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಸ್ವಚ್ಛತಾ ಅಭಿಯಾನ ಹಾಗೂ ಯುವಜನ ಜಾಗೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಯುವಕರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಈ ಚಟುವಟಿಕೆಗಳು ಸಹಕಾರಿಯಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಶಾಸಕ ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲ್ ರಜಾಕ ಬೇನೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್.ಎಸ್. ಸೀತಾರಾಮು, ಉಪ ಸಮನ್ವಯಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ. ತೋರಣಗಟ್ಟಿ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಇದ್ದರು.




