ಕರ್ನಾಟಕ ರಾಜ್ಯ ಸರ್ಕಾರ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ರಾಜ್ಯದ ಬೌದ್ಧ ಸಮುದಾಯದ ದಶಕಗಳ ಹೋರಾಟಕ್ಕೆ ಸಂದ ಜಯವಾಗಿದೆ. ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಮಹತ್ವದ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬೌದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರೇಮನಾಥ ಗರಸಂಗಿ ಅಭಿನಂದನೆ ಸಲ್ಲಿಸಿದ್ದಾರೆ.
ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಅಂಬೇಡ್ಕರ್ ಅನುಯಾಯಿಗಳು ಹಲವು ವರ್ಷಗಳಿಂದ ರಾಜ್ಯಾದ್ಯಂತ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ. ಮೆರವಣಿಗೆ, ಧರಣಿ, ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನ ಸೆಳೆಯುವುದರ ಜೊತೆಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗಿತ್ತು. ಸಮಾಜ ಕಲ್ಯಾಣ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪ್ರತ್ಯೇಕ ನಿಗಮದ ಅಗತ್ಯವನ್ನು ಮನವರಿಕೆ ಮಾಡಿಕೊಡಲಾಗಿತ್ತು.
ಈ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿದವರು ನಳಂದ ಬುದ್ಧ ವಿಹಾರದ ಪೂಜ್ಯ ಬೋಧಿಧತ್ತ ಬಂತೆಜಿಯವರು. ಸನ್ನತಿಯಿಂದ ಬೆಂಗಳೂರಿನವರೆಗೆ ಕಾಲ್ನಡಿಗೆ ಪಾದಯಾತ್ರೆ ನಡೆಸಿ, ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ವಿವಿಧ ಭಾಗಗಳ ಬೌದ್ಧ ಅನುಯಾಯಿಗಳನ್ನು ಒಗ್ಗೂಡಿಸಿ ಬೃಹತ್ ಹೋರಾಟ ಸಂಘಟಿಸಿದ್ದರು. ಅಂದಿನ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಒತ್ತಾಯಿಸಲಾಗಿತ್ತು.
“ಸಮುದಾಯದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬೌದ್ಧ ಸಮ್ಮೇಳನದಲ್ಲಿಯೂ ನಿಗಮ ಸ್ಥಾಪನೆಯ ವಿಚಾರ ಪ್ರಮುಖವಾಗಿ ಪ್ರಸ್ತಾಪವಾಗಿತ್ತು. ಅಂದು ನೀಡಿದ್ದ ಭರವಸೆಯಂತೆ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಾತು ಉಳಿಸಿಕೊಂಡಿದ್ದು, ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿರುವುದು ಸಮುದಾಯದಲ್ಲಿ ಸಂತಸ ಮೂಡಿಸಿದೆ” ಎಂದು ಗರಸಂಗಿ ತಿಳಿಸಿದ್ದಾರೆ.
“ನಿಗಮ ಸ್ಥಾಪನೆಯಿಂದಲೇ ಸರ್ಕಾರದ ಜವಾಬ್ದಾರಿ ಪೂರ್ಣಗೊಳ್ಳುವುದಿಲ್ಲ. ನಿಗಮದ ಅಧ್ಯಕ್ಷರು ಮತ್ತು ನಿರ್ದೇಶಕರ ನೇಮಕಾತಿಯಲ್ಲಿ ರಾಜಕೀಯ ಹಿನ್ನೆಲೆಗೆ ಮಾತ್ರ ಆದ್ಯತೆ ನೀಡದೆ, ಬೌದ್ಧ ಧಮ್ಮದ ತತ್ವ, ಸಿದ್ಧಾಂತ, ಮೌಲ್ಯಗಳನ್ನು ಪಾಲಿಸುತ್ತಿರುವ ಸಮುದಾಯದ ಏಳಿಗೆಗಾಗಿ ನಿಸ್ವಾರ್ಥವಾಗಿ ಶ್ರಮಿಸುತ್ತಿರುವ ಅರ್ಹ, ಪ್ರಾಮಾಣಿಕ ಮತ್ತು ಅನುಭವಸ್ಥರಿಗೆ ಅವಕಾಶ ನೀಡಬೇಕು. ಆಗ ಮಾತ್ರ ನಿಗಮ ಸ್ಥಾಪನೆಯ ನೈಜ ಉದ್ದೇಶ ಸಾಕಾರಗೊಳ್ಳಲಿದೆ” ಎಂದು ಅವರು ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಚಿತ್ತಾಪುರ ತಾಲ್ಲೂಕಿನ ಐತಿಹಾಸಿಕ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನೂ ಪ್ರೇಮನಾಥ ಗರಸಂಗಿ ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಸನ್ನತಿಗೆ ಐತಿಹಾಸಿಕ ಹಾಗೂ ಪುರಾತತ್ವ ಮಹತ್ವದ ಮನ್ನಣೆ ದೊರೆಯಲಿದ್ದು, ಬೌದ್ಧ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಜಗತ್ತಿಗೆ ಪರಿಚಯಿಸುವ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ಸನ್ನತಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.




