ಸಾರಿಗೆ ಇಲಾಖೆಯ ಪ್ರಮುಖ ಸೇವೆಗಳನ್ನು ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ನೆರವಿಲ್ಲದೆ ನೇರವಾಗಿ ಆನ್‌ಲೈನ್ ಮೂಲಕ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಸಾರ್ವಜನಿಕರು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ ಸೇವೆಗಳನ್ನು ಪಡೆಯುವಂತೆ ಬಾಗಲಕೋಟೆ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರಶೇಖರ ಪಾಟೀಲ ಮನವಿ ಮಾಡಿದ್ದಾರೆ.
ಸಾರಿಗೆ ಇಲಾಖೆಯ ವಾಹನ-4 ಮತ್ತು ಸಾರಥಿ-4 ತಂತ್ರಾಂಶಗಳ ಮೂಲಕ ಸಾರ್ವಜನಿಕರು ತಮ್ಮ ಹಂತದಲ್ಲಿಯೇ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ಇಲಾಖೆಯ ವಿವಿಧ ಸೇವೆಗಳನ್ನು ಸುಲಭವಾಗಿ ಪಡೆದುಕೊಳ್ಳಲು ಅವಕಾಶವಿದೆ.
“ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಮೂರನೇ ವ್ಯಕ್ತಿಗಳು ಆನ್‌ಲೈನ್ ಸೌಲಭ್ಯ ದುರುಪಯೋಗಪಡಿಸಿಕೊಂಡು ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಹಣ ಸಾರ್ವಜನಿಕರಿಂದ ವಸೂಲಿ ಮಾಡುತ್ತಿರುವ ಕುರಿತು ಕಚೇರಿಗೆ ದೂರುಗಳು ಸಲ್ಲಿಕೆಯಾಗುತ್ತಿವೆ ಎಂದು” ಅವರು ತಿಳಿಸಿದ್ದಾರೆ.
“ಸಾರ್ವಜನಿಕರು ಸಾರಿಗೆ ಇಲಾಖೆಯ ಆನ್‌ಲೈನ್ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರ ನಿಗದಿಪಡಿಸಿರುವ ಶುಲ್ಕ ಮತ್ತು ತೆರಿಗೆಯನ್ನು ಮಾತ್ರ ಪಾವತಿಸಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಗೆ ಹೆಚ್ಚುವರಿ ಹಣ ನೀಡಬಾರದು” ಎಂದು ಅವರು ಮನವಿ ಮಾಡಿದ್ದಾರೆ.
ಸಾರಿಗೆ ಇಲಾಖೆಯ ಸೇವೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಯಾವುದೇ ಕುಂದುಕೊರತೆಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಸಂಬಂಧಪಟ್ಟ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.
ಅಧಿಕೃತ ವೆಬ್‌ಸೈಟ್: https://parivahan.gov.in




