ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ರಶ್ಮಿ ಮಹೇಶ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗೆ ತಿಂಗಳಿಗೆ ಕನಿಷ್ಠ ಒಂದು ಬಾರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಸಬೇಕು ಎಂದರು. ಕಳೆದ ವರ್ಷದ ಫಲಿತಾಂಶ ಆಧಾರದ ಮೇಲೆ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಿಎಸ್ಆರ್ ಅನುದಾನದಡಿ 60 ಶಾಲೆಗಳ ಅಭಿವೃದ್ಧಿಗೆ ನಿರ್ದಿಷ್ಟ ಯೋಜನೆ ರೂಪಿಸಿ, ವಾರ್ಷಿಕ ಗುರಿ ನಿಗದಿಪಡಿಸಿ ಅದೇ ವರ್ಷದಲ್ಲಿ ಕ್ರಮವಹಿಸಬೇಕು. 15 ದಿನಗಳೊಳಗೆ ಎಂಒಯು ಮಾಡಿಕೊಂಡು ಕಾಮಗಾರಿ ಪ್ರಗತಿಯನ್ನು ಪ್ರತಿದಿನ ಪರಿಶೀಲಿಸಬೇಕು ಎಂದು ಸೂಚಿಸಿದರು. ದಾನದ ಜಮೀನುಗಳನ್ನು ಇಲಾಖೆ ಹೆಸರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದರು.
“20ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳ ಮಕ್ಕಳನ್ನು ಕೆಪಿಎಸ್ ಅಥವಾ ಪಿಎಂಶ್ರೀ ಶಾಲೆಗಳಿಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಬೇಕು. ಅಡುಗೆ ಸಿಬ್ಬಂದಿಯನ್ನು ತೆಗೆದುಹಾಕಬಾರದು ಎಂದು ಸ್ಪಷ್ಟಪಡಿಸಿದರು. ದಾಖಲಾತಿ ಪ್ರಮಾಣ ಶೇ.35ರಷ್ಟು ಹೆಚ್ಚಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ನಿರ್ಲಕ್ಷ್ಯಕ್ಕೆ ಶಿಸ್ತುಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.
ಸಭೆಯಲ್ಲಿ ಕೆ.ಎಸ್.ಇ.ಎ.ಬಿಯ ಅಧ್ಯಕ್ಷರು ಹಾಗೂ ಮಧ್ಯಾಹ್ನ ಬಿಸಿ ಊಟದ ನಿರ್ದೇಶಕ ಪ್ರಕಾಶ ಜಿ.ಟಿ., ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ, ದಾರವಾಢ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು ಸೇರಿದಂತೆ ಇತರರು ಉಪಸ್ಥಿತರಿದ್ದರು.




