ಬೇಸಿಗೆ ಆರಂಭವಾಗುವ ಮುನ್ನವೇ ಕೃಷ್ಣಾ ಹಾಗೂ ಘಟಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದ್ದು, ನದಿ ತೀರದ ಜನರು, ಜಾನುವಾರುಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರು ಸಂಗ್ರಹಿಸಿಡುವಂತೆ ಒತ್ತಾಯಿಸಿ ನದಿ ತೀರದ ಮೂಲನಿವಾಸಿಗಳು ಮೌನ ಪ್ರತಿಭಟನೆ ನಡೆಸಿದರು.
ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹೋರಾಟಗಾರರು, ಮುಂದಿನ ಮಳೆಗಾಲದವರೆಗೂ ಆಲಮಟ್ಟಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದ ನೀರನ್ನು ಕಾಯ್ದಿರಿಸಬೇಕು ಎಂದು ಆಗ್ರಹಿಸಿದರು.
ಇದಕ್ಕಾಗಿ ತಕ್ಷಣವೇ ನೀರಾವರಿ ಸಲಹಾ ಸಮಿತಿಯ ವಿಶೇಷ ಸಭೆ ಕರೆಯಬೇಕು. ನದಿ ತೀರದ ಜನರ ಕುಡಿಯುವ ನೀರಿನ ಅಗತ್ಯ, ಜಾನುವಾರುಗಳ ಬಳಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರನ್ನು ಮೊದಲ ಆದ್ಯತೆಯಾಗಿ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶಗಳಿಗೆ ನದಿ ಹಾಗೂ ಜಲಾಶಯದ ನೀರನ್ನು ಬಳಸುವುದಕ್ಕೆ ನಿರ್ಬಂಧ ವಿಧಿಸಬೇಕು. ಘಟಪ್ರಭಾ ನದಿಯ ನೈಸರ್ಗಿಕ ಹರಿವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ಮುಂದುವರಿಸಬೇಕು. ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್‌ಗಳನ್ನು ಕಾಲಕಾಲಕ್ಕೆ ನೀರಿನಿಂದ ತುಂಬಿಸುವ ಮೂಲಕ ನದಿ ಪಾತ್ರದ ಜನಜೀವನ ಮತ್ತು ಪರಿಸರ ವ್ಯವಸ್ಥೆಯನ್ನು ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನೀರಿನ ಲಭ್ಯತೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ವೈಜ್ಞಾನಿಕ ಹಾಗೂ ಸಮರ್ಪಕ ಜಲ ನಿರ್ವಹಣೆ ಕೈಗೊಳ್ಳದಿದ್ದರೆ ನದಿ ತೀರದ ಜನರು, ರೈತರು ಮತ್ತು ಜಾನುವಾರುಗಳು ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಕೃಷ್ಣಾ ಮತ್ತು ಘಟಪ್ರಭಾ ನದಿಗಳ ನೀರು ಕೇವಲ ವಾಣಿಜ್ಯ ಉದ್ದೇಶಗಳಿಗೆ ಸೀಮಿತವಾಗದೆ ನದಿ ತೀರದ ಜನರ ಬದುಕು, ಕೃಷಿ ಮತ್ತು ಪರಿಸರದ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದರು.




