ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ ಜಿಲ್ಲೆಯ 14 ವಿವಿಧ ಸ್ಥಳಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಯಿಂದ ಜಿಲ್ಲೆಯ ವಿವಿಧ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ವೈದ್ಯಕೀಯ ಸಂಸ್ಥೆಗಳಲ್ಲಿ ಶಿಬಿರಗಳು ನಡೆಯಲಿವೆ.
ಪ್ರತಿಯೊಂದು ಶಿಬಿರದಲ್ಲಿ ಕನಿಷ್ಠ 50 ಯುನಿಟ್ ರಕ್ತ ಸಂಗ್ರಹಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ.ಬಾಗಲಕೋಟೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಎಚ್.ಎಸ್.ಕೆ. ರಕ್ತ ಕೇಂದ್ರ, ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರ, ಹುನಗುಂದ, ಬೀಳಗಿ, ಮುಧೋಳ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು, ಮಹಾಲಿಂಗಪುರ ಸಮುದಾಯ ಆರೋಗ್ಯ ಕೇಂದ್ರ, ಜಮಖಂಡಿ ಉಪವಿಭಾಗೀಯ ಆಸ್ಪತ್ರೆ, ರಬಕವಿ-ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರ, ಇಳಕಲ್ ಸಾರ್ವಜನಿಕ ಆಸ್ಪತ್ರೆ, ಬಾದಾಮಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಬಾಡಗಂಡಿಯ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಸೇರಿದಂತೆ ವಿವಿಧೆಡೆ ಶಿಬಿರಗಳು ನಡೆಯಲಿವೆ.
ಶಿಬಿರಗಳನ್ನು ಯಶಸ್ವಿಯಾಗಿ ನಡೆಸಲು ಸಂಬಂಧಿಸಿದ ರಕ್ತ ಕೇಂದ್ರಗಳ ನುರಿತ ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶಿಬಿರಗಳಲ್ಲಿ ಸಂಗ್ರಹವಾಗುವ ಒಟ್ಟು ರಕ್ತದ ಯುನಿಟ್‌ಗಳಲ್ಲಿ ಶೇ.25ರಷ್ಟನ್ನು ಜಿಲ್ಲಾ ಆಸ್ಪತ್ರೆಯ ರಕ್ತ ಕೇಂದ್ರಕ್ಕೆ ನೀಡುವಂತೆ ಸಂಬಂಧಿಸಿದ ರಕ್ತ ಕೇಂದ್ರಗಳಿಗೆ ಸೂಚಿಸಲಾಗಿದೆ.
ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಮಾನವೀಯ ಸೇವೆಯಾಗಿದೆ. ಆರೋಗ್ಯವಂತ ನಾಗರಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಈ ಅಭಿಯಾನದಲ್ಲಿ ಕೈಜೋಡಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಶಿಬಿರಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ 94498 46958, 86603 96472 ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



