ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯವಶ್ಯವಾಗಿದ್ದು, ವುಶು ಮತ್ತು ಕರಾಟೆ ಕ್ರೀಡೆಗಳು ಆತ್ಮರಕ್ಷಣೆಯ ದೃಷ್ಟಿಯಿಂದಲೂ ಮಹತ್ವ ಪಡೆದಿವೆ ಎಂದು ಕರ್ನಾಟಕ ವುಶು ಸಂಸ್ಥೆಯ ರಾಜ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ ಹೇಳಿದರು.
ಬಾಗಲಕೋಟೆ ನಗರದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಎಡಿಎಂ ಬ್ಲಾಕ್‌ನಲ್ಲಿ ಶನಿವಾರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್), ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಎಚ್‌ಎಸ್‌ಕೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ವುಶು ಮತ್ತು ಕರಾಟೆ (ಪುರುಷ ಹಾಗೂ ಮಹಿಳಾ) ಸ್ಪರ್ಧೆ ಹಾಗೂ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವುಶು ಮತ್ತು ಕರಾಟೆ ತಂಡಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಮಹತ್ವದ ಕ್ರೀಡಾಕೂಟಕ್ಕೆ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಆತಿಥ್ಯ ವಹಿಸಿರುವುದು ವಿಶೇಷವಾಗಿದೆ.
“ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಪ್ರತಿಭಾವಂತ ಕ್ರೀಡಾಪಟುಗಳನ್ನು ವಿಶ್ವವಿದ್ಯಾಲಯದ ತಂಡಗಳಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರು ಅಖಿಲ ಭಾರತ ಹಾಗೂ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟಗಳಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ. ವುಶು ಕ್ರೀಡೆಯ ಬೆಳವಣಿಗೆಗೆ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ” ಎಂದು ತಿಳಿಸಿದರು.
“ಕರ್ನಾಟಕ ವುಶು ಸಂಸ್ಥೆಯ ಉಪಾಧ್ಯಕ್ಷ ಹಾಗೂ ವೈದ್ಯಕೀಯ ಮಹಾವಿದ್ಯಾಲಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಬೇವೂರ ಮಾತನಾಡಿ, ಮೈಸೂರು, ಕೊಡಗು, ಮಂಗಳೂರು, ವಿಜಯಪುರ, ಗದಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ತಂಡಗಳು ಹಾಗೂ ಆತಿಥೇಯ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ತಂಡ ಸ್ಪರ್ಧೆಯಲ್ಲಿ ಪಾಲ್ಗೊಂಡಿವೆ. ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ” ಎಂದರು.
ಸ್ಪರ್ಧೆಯಲ್ಲಿ ವುಶು ಮತ್ತು ಕರಾಟೆ ವಿಭಾಗಗಳ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ತಮ್ಮ ಕ್ರೀಡಾ ಕೌಶಲ ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಶೋಕ ಮೋಕಾಶಿ, ಕೋಶಾಧ್ಯಕ್ಷ ಸಂಗಮೇಶ ಲಾಯದಗುಂದಿ, ವಿಶ್ವವಿದ್ಯಾಲಯದ ಆಯ್ಕೆ ಸಮಿತಿ ಅಧ್ಯಕ್ಷ ಡಾ. ಬಿ.ಆರ್ ದೇಸಾಯಿ, ಸದಸ್ಯರಾದ ಡಾ. ಜಗದೀಶ ಹುಲಗೇರಿ, ಮಲ್ಲಿಕಾರ್ಜುನ ತುಂಟುಣಿ, ವಿಜಯಪುರದ ಬಿಎಲ್‌ಡಿಇಎ ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಇರಪ್ಪ ಇಕ್ಕಳಕಿ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ವಿಜಯಕುಮಾರ ಹಿರೇಮಠ, ಕೈಲಾಶ ಹಿರೇಮಠ, ರಾಜಶೇಖರ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.




