ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಜನೋತ್ಸವದಂತಹ ವೇದಿಕೆಗಳು ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅಭಿಮಾನ ಮೂಡಿಸುತ್ತವೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಬಾಗಲಕೋಟೆ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಂತ್ರಜ್ಞಾನ ಯುಗದಲ್ಲಿ ಮುನ್ನಡೆಯುತ್ತಿರುವ ಯುವಕರು ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಕಲೆಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಯುವಜನೋತ್ಸವದಂತಹ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಸಂಪ್ರದಾಯ, ಸಂಸ್ಕಾರ ಹಾಗೂ ಜನಪದ ಕಲೆಗಳ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಯುವಜನರಲ್ಲಿ ನಾಡು ಹಾಗೂ ದೇಶದ ಸಾಂಸ್ಕೃತಿಕ ಕಲೆಗಳ ಬಗ್ಗೆ ಆಸಕ್ತಿ ಮತ್ತು ಅಭಿಮಾನ ಮೂಡಿಸುವಲ್ಲಿ ಯುವಜನೋತ್ಸವ ಮಹತ್ವದ ಪಾತ್ರ ವಹಿಸುತ್ತದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳು ಯುವ ಸಮೂಹದಲ್ಲಿ ಆತ್ಮವಿಶ್ವಾಸ, ಸಾಮರ್ಥ್ಯ ಹಾಗೂ ಮನೋಬಲ ಹೆಚ್ಚಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಡೋಂಬರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಉಪಪ್ರಾಚಾರ್ಯೆ ಗಿರಿಜಾ ನಡುವಿನಮನಿ, ಪದವಿ ಪೂರ್ವ ವಿಭಾಗದ ಪ್ರಭಾರಿ ಪ್ರಾಚಾರ್ಯ ಜಿ.ಡಿ. ಲಮಾಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಯುವಜನೋತ್ಸವದ ವಿವಿಧ ಸ್ಪರ್ಧೆಗಳಿಗೆ ಡಾ. ಮಾರುತಿ ಪಾಟೋಳಿ, ಡಾ. ಚಂದ್ರಶೇಖರ ಕಾಳನ್ನವರ, ಸಂಗಮೇಶ ಸಣ್ಣತಂಗಿ, ಪ್ರೊ. ಶ್ರೀಹರಿ ಧೂಪದ, ಪವಿತ್ರಾ ಜಕ್ಕಪ್ಪನವರ, ಬಸವರಾಜ ಸಿಂದಗಿಮಠ, ವೀರೇಶ ರುದ್ರಸ್ವಾಮಿ, ಸಂಗಮೇಶ ಬಡಿಗೇರ ಹಾಗೂ ಪ್ರೊ. ರವಿ ಗೌಡರ ಸೇರಿದಂತೆ 15 ಮಂದಿ ನಿರ್ಣಾಯಕರಾಗಿ ಭಾಗವಹಿಸಿದ್ದರು.
ಜಿಲ್ಲೆಯ ವಿವಿಧ ಕಾಲೇಜುಗಳ ಯುವ ಕಲಾವಿದರು, ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ ಯುವಜನೋತ್ಸವದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.



