ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಹೊಂದಿರುವ ಬೀಳಗಿ ತಾಲೂಕಿನ ಚಿಕ್ಕಸಂಗಮದ ಸಮಗ್ರ ಅಭಿವೃದ್ಧಿಗೆ ₹27 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ. ಪಾಟೀಲ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಚಿಕ್ಕಸಂಗಮದಲ್ಲಿ ನಡೆದ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ₹2 ಕೋಟಿ ಅನುದಾನ ಒದಗಿಸಲಾಗಿದೆ. ರಸ್ತೆ, ಕುಡಿಯುವ ನೀರು, ವಿದ್ಯುತ್ ಹಾಗೂ ಸ್ವಚ್ಛತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಭಕ್ತರ ಬಹುದಿನಗಳ ಬೇಡಿಕೆಯಂತೆ ₹1 ಕೋಟಿ ವೆಚ್ಚದಲ್ಲಿ ರಥ ನಿರ್ಮಾಣ ಮಾಡಲಾಗುತ್ತಿದ್ದು, ₹25 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಲಕ್ಷ ದೀಪೋತ್ಸವದ ಹಿನ್ನೆಲೆಯಲ್ಲಿ ಚಿಕ್ಕಸಂಗಮ ಸಾವಿರಾರು ದೀಪಗಳ ಬೆಳಕಿನಲ್ಲಿ ಕಂಗೊಳಿಸಿತು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಮಠಾಧೀಶರು, ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.



