ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು, 2027ರ ಜನವರಿ 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನ.23ರಿಂದ ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಮತದಾರರ ವಿವರ ಪರಿಶೀಲಿಸುತ್ತಿದ್ದಾರೆ.
ಡಿ.1ರಂದು ಕರಡು ಪಟ್ಟಿ ಪ್ರಕಟವಾಗಲಿದ್ದು, ಡಿ.1ರಿಂದ 31ರವರೆಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.ಸ್ವೀಕೃತ ಅರ್ಜಿಗಳನ್ನು ಜ.14ರೊಳಗೆ ವಿಲೇವಾರಿ ಮಾಡಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದರು.
ಜಿಲ್ಲೆಯಲ್ಲಿರುವ 1,855 ಮತಗಟ್ಟೆಗಳ ಪೈಕಿ 24 ಮತಗಟ್ಟೆಗಳನ್ನು ವಿಲೀನಗೊಳಿಸಿ, ಅಗತ್ಯವಿರುವ ಕಡೆ 14 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಪ್ರಕ್ರಿಯೆ ಬಳಿಕ ಒಟ್ಟು 1,845 ಮತಗಟ್ಟೆಗಳು ಇರಲಿವೆ.ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬಹುದು. 2027ರ ಜನವರಿ 1 ಸೇರಿದಂತೆ ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ರಂದು 18 ವರ್ಷ ಪೂರ್ಣಗೊಳಿಸುವ ಅರ್ಹ ಯುವಕರಿಗೂ ಮುಂಗಡ ನೋಂದಣಿಗೆ ಅವಕಾಶವಿದೆ.
ಮತದಾರರು ತಮ್ಮ ಹೆಸರು ಹಾಗೂ ವಿಳಾಸದ ವಿವರಗಳನ್ನು ಪರಿಶೀಲಿಸಿಕೊಂಡು ಅಗತ್ಯ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಡೋಂಬರ, ಉಪವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಸೀಲ್ದಾರ್ ವಾಸುದೇವ ಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.



